ADVERTISEMENT

ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ

ಜಿಲ್ಲೆಗೆ ಮೊದಲ ಬಾರಿಗೆ ಪಕ್ಷದ ಉನ್ನತ ಹುದ್ದೆ, ಕಾರ್ಯಕರ್ತರಲ್ಲಿ ಹೆಚ್ಚಿದ ಬಲ

​ಪ್ರಜಾವಾಣಿ ವಾರ್ತೆ
Published 4 ಜುಲೈ 2018, 12:47 IST
Last Updated 4 ಜುಲೈ 2018, 12:47 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಬೀದರ್: ಜಿಲ್ಲೆಯ ಪ್ರಭಾವಿ ರಾಜಕಾರಣಿ ಈಶ್ವರ ಖಂಡ್ರೆ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನಗೊಂಡಿದ್ದ ಈಶ್ವರ ಖಂಡ್ರೆ ಅವರಿಗೆ ಪಕ್ಷ ಈಗ ಗುರುತರವಾದ ಹುದ್ದೆ ನೀಡಿ ಸಮಾಧಾನಪಡಿಸಿದೆ. ನೆರೆಯ ಕಲಬುರ್ಗಿಯ ಮಾಜಿ ಮುಖ್ಯಮಂತ್ರಿ ದಿ. ಎನ್‌. ಧರ್ಮಸಿಂಗ್, ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ. ಜಿಲ್ಲೆಗೆ ಈವರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆತಿಲ್ಲ. ಆದರೆ, ಇದೇ ಮೊದಲ ಬಾರಿಗೆ ಕಾರ್ಯಾಧ್ಯಕ್ಷ ಸ್ಥಾನ ದಕ್ಕಿದೆ.

ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ರಚನೆಯಾದಾಗ ಕಾಂಗ್ರೆಸ್‌ ಕೋಟಾದಲ್ಲಿ ಜಿಲ್ಲೆಯಲ್ಲಿ ನಾಲ್ಕನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ರಾಜಶೇಖರ ಪಾಟೀಲ ಹಾಗೂ ‘ಹ್ಯಾಟ್ರಿಕ್’ ಗೆಲುವು ಸಾಧಿಸಿದ್ದ ಈಶ್ವರ ಖಂಡ್ರೆ ಸಚಿವ ಸ್ಥಾನಕ್ಕಾಗಿ ತೀವ್ರ ಪೈಪೋಟಿ ನಡೆಸಿದ್ದರು. ಹಿರಿತನ ಪರಿಗಣಿಸಿ ಹೈಕಮಾಂಡ್‌ ರಾಜಶೇಖರ ಪಾಟೀಲ ಅವರಿಗೆ ಮಣೆ ಹಾಕಿತ್ತು.

ADVERTISEMENT

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 22 ತಿಂಗಳು ಪೌರಾಡಳಿತ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರಾಗಿ ಕೆಲಸ ಮಾಡಿದ್ದ ಈಶ್ವರ ಖಂಡ್ರೆ ಸಹಜವಾಗಿಯೇ ಬೇಸರಗೊಂಡಿದ್ದರು. ಹೀಗಾಗಿ ಪಕ್ಷದಲ್ಲಿ ಉನ್ನತ ಹುದ್ದೆ ನೀಡಿ ಅವರನ್ನು ಓಲೈಸುವ ಪ್ರಯತ್ನಗಳು ನಡೆದಿದ್ದವು. ಒಂದು ಹಂತದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೂ ಅವರ ಹೆಸರು ಕೇಳಿ ಬಂದಿತ್ತು. ಆದರೆ, ಅಂತಿಮವಾಗಿ ಕಾರ್ಯಾಧ್ಯಕ್ಷ ಸ್ಥಾನ ನೀಡಿರುವ ಪಕ್ಷ ಸಂಘಟನೆ ಬಲಪಡಿಸುವ ಹೊಣೆಗಾರಿಕೆಯನ್ನು ಅವರಿಗೆ ವಹಿಸಿದೆ.

ಈಶ್ವರ ಖಂಡ್ರೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಪುತ್ರರಾಗಿದ್ದಾರೆ. ಸತತ ಮೂರನೇ ಬಾರಿಗೆ ಭಾಲ್ಕಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಅವಧಿಯಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಆಯ್ಕೆಯಾಗಿದ್ದರು.

ಈಶ್ವರ ಖಂಡ್ರೆ ಹಿಂದೆಯೂ ಪಕ್ಷದ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿ ಗಮನ ಸೆಳೆದಿದ್ದಾರೆ. ಕಾಂಗ್ರೆಸ್ ಸೇವಾ ದಳದ ರಾಜ್ಯ ಸಂಘಟನಾ ಕಾರ್ಯದರ್ಶಿ, ಬೀದರ್ ಜಿಲ್ಲಾ ಘಟಕದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದರಿಂದ ಈ ಭಾಗದಲ್ಲಿ ಕಾಂಗ್ರೆಸ್‌ಗೆ ಇನ್ನಷ್ಟು ಬಲ ಬಂದಿದೆ. ಕಾರ್ಯಕರ್ತರ ಉತ್ಸಾಹ ಇಮ್ಮಡಿಯಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.