
ಭಾಲ್ಕಿ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ವತಿಯಿಂದ ಬೀದರ್‌ನ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ನ. 7ರಂದು ಕನ್ನಡ ದೀಕ್ಷೆ ಹಾಗೂ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ ಹೇಳಿದರು.
ಪಟ್ಟಣದ ಚನ್ನಬಸವಾಶ್ರಮದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
‘ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಬಸವಕಲ್ಯಾಣದ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದವರು ಸಾನ್ನಿಧ್ಯ, ವೇದಿಕೆ ರಾಜ್ಯ ಅಧ್ಯಕ್ಷ ನಾರಾಯಣಗೌಡ ಅಧ್ಯಕ್ಷತೆ ವಹಿಸುವರು. ಪೌರಾಡಳಿತ ಸಚಿವ ರಹೀಂಖಾನ್, ಏಕತಾ ಫೌಂಡೇಷನ್ ಅಧ್ಯಕ್ಷ ರವೀಂದ್ರ ಸ್ವಾಮಿ, ಜಿ.ಎಸ್. ಇನ್ಫ್ರಾ ವ್ಯವಸ್ಥಾಪಕ ನಿರ್ದೇಶಕ ಸೂರ್ಯಕಾಂತ ಅಲ್ಮಾಜೆ ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಉಪಾಧ್ಯಕ್ಷ ಬಸವರಾಜ ಧನ್ನೂರ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ಸಾರ್ವಜನಿಕರಲ್ಲಿ ಕನ್ನಡಾಭಿಮಾನ ಬೆಳೆಸುವ ದಿಸೆಯಲ್ಲಿ ರಾಜ್ಯದಾದ್ಯಂತ ಕನ್ನಡ ದೀಕ್ಷೆ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ಕಾರ್ಯಕ್ರಮದ ಯಶಸ್ವಿಗೆ ವೇದಿಕೆ ಕಾರ್ಯಕರ್ತರು ಹಾಗೂ ಕನ್ನಡಾಭಿಮಾನಿಗಳ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ವೇದಿಕೆಯ ಭಾಲ್ಕಿ ತಾಲ್ಲೂಕು ಘಟಕದ ಅಧ್ಯಕ್ಷ ಬಂಡೆಪ್ಪ ಕಸರಣ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಉಪಾಧ್ಯಕ್ಷರಾದ ಸೋಮಶೇಖರ ಸಜ್ಜನ್, ಶಿವರುದ್ರ ತೀರ್ಥ, ಕಾರ್ಯದರ್ಶಿ ರವಿ ಭವರೆ, ಔರಾದ್ ತಾಲ್ಲೂಕು ಅಧ್ಯಕ್ಷ ಅನಿಲ್ ಹೇಡೆ, ಕಮಲನಗರ ತಾಲ್ಲೂಕು ಅಧ್ಯಕ್ಷ ಮಂಜುನಾಥ ಸ್ವಾಮಿ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಗಣೇಶ ಸತಾಣೆ, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ವೀರೇಶ ರೆಡ್ಡಿ, ಬೀದರ್ ತಾಲ್ಲೂಕು ಅಧ್ಯಕ್ಷ ವೀರಶೆಟ್ಟಿ ಗೌಸಪುರೆ, ಬೀದರ್ ನಗರ ಘಟಕದ ಅಧ್ಯಕ್ಷ ಶಿವಕುಮಾರ ಭೈರನಳ್ಳಿಕರ್, ತುಕಾರಾಮ ಜೈರಾಮ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.