ADVERTISEMENT

‘ಬಾಲಕರನ್ನು ನೇಮಿಸಿಕೊಂಡರೆ ಕಾನೂನು ಕ್ರಮ’

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2025, 16:10 IST
Last Updated 12 ಜೂನ್ 2025, 16:10 IST
ಬೀದರ್‌ನ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು
ಬೀದರ್‌ನ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿದರು   

ಬೀದರ್‌: ‘ಜಿಲ್ಲೆಯಲ್ಲಿ ಯಾವುದೇ ಅಂಗಡಿಗಳಲ್ಲಿ ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವಂತಿಲ್ಲ. ಒಂದು ವೇಳೆ ನೇಮಿಸಿಕೊಂಡಿರುವುದು ಕಂಡುಬಂದರೆ ಅಂಥ ಮಾಲೀಕರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಬಾಲಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ ಕಸಿದು ದುಡಿಮೆಗೆ ನೂಕುತ್ತದೆ. ಹೀಗಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ನಾಗರಿಕರು ಎಲ್ಲಿಯಾದರೂ ಬಾಲಕಾರ್ಮಿಕರು ಕಂಡಲ್ಲಿ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಅಥವಾ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಕರೆ ಮಾಡಿ ತಿಳಿಸಬೇಕು’ ಎಂದರು.

ADVERTISEMENT

‘14 ವರ್ಷದೊಳಗಿನ ಮಕ್ಕಳನ್ನು ಬಾಲಕಾರ್ಮಿಕರು ಮತ್ತು 14ರಿಂದ 18 ವರ್ಷದೊಳಗಿನ ಮಕ್ಕಳನ್ನು ಕಿಶೋರ ಕಾರ್ಮಿಕರೆಂದು ಪರಿಗಣಿಸಲಾಗುತ್ತದೆ. 1986ರ ಬಾಲಕಾರ್ಮಿಕ ನಿಷೇಧ ಕಾಯ್ದೆ ಅನ್ವಯ ಬಾಲಕಾರ್ಮಿಕ ಪದ್ಧತಿ ಸಂಪೂರ್ಣ ನಿಷೇಧ ಮತ್ತು ಕಿಶೋರ ಕಾರ್ಮಿಕರನ್ನು ಯಾವುದೇ ಅಪಾಯಕಾರಿ ಕೆಲಸಗಳಲ್ಲಿ ನೇಮಿಸಿಕೊಳ್ಳುವುದು ಕಾನೂನಾತ್ಮಕ ಅಪರಾಧ ಎಂದು ಪರಿಗಣಿಸಲಾಗುತ್ತದೆ’
ಎಂದರು.

‘ಶಿಕ್ಷಣ ಒಂದು ಮೂಲಭೂತ ಹಕ್ಕು ಎಂದು ಸಂವಿಧಾನದ 21ಎ ವಿಧಿ ತಿಳಿಸುತ್ತದೆ. ಅದರಂತೆ 6ರಿಂದ 14 ವರ್ಷದೊಳಗಿನ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣ ನೀಡಲಾಗುತ್ತದೆ. ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ನೇರವಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸೇರಿಸಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುವುದು’ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಮಾತನಾಡಿ, ‘14 ವರ್ಷದೊಳಗಿನ ಮಕ್ಕಳು ಹೆಚ್ಚಾಗಿ ಹೊಟೇಲ್, ಗ್ಯಾರೇಜ್, ದಾಬಾ ಮತ್ತು ಗುಡಿ ಕೈಗಾರಿಕೆಗಳಲ್ಲಿ ಕಂಡು ಬರುತ್ತಾರೆ. ಬಡತನ, ಕೌಟುಂಬಿಕ ಕಲಹ, ಮಕ್ಕಳಿಗೆ ಪೋಷಕರು ಇಲ್ಲದೇ ಇರುವುದು ಸೇರಿದಂತೆ ಅದಕ್ಕೆ ಅನೇಕ ಕಾರಣಗಳಿವೆ. ಆದರೆ ನಾವು ಅವರಿಗೆ ಬಾಲಕಾರ್ಮಿಕ ಪದ್ಧತಿಯಿಂದ ಆಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದರು.

‘ಮಕ್ಕಳಿಗೆ ಬಾಲ್ಯವನ್ನು ಆಟ-ಪಾಠಗಳ ಜೊತೆಗೆ ಕಳೆಯಲು ಬಿಡಬೇಕು. ಬೀದರ್‌ ಜಿಲ್ಲೆಯನ್ನು ಬಾಲಕಾರ್ಮಿಕ ಪದ್ಧತಿ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಶ್ರಮಿಸಬೇಕು. ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ, ಬಾಲ್ಯ ವಿವಾಹ ತಡೆ, ಪೋಕ್ಸೊ ಕಾಯ್ದೆ ಬಗೆಗೆ ಜನರಿಗೆ ಅರಿವು ಮೂಡಿಸಬೇಕು ಕೇವಲ ಅಧಿಕಾರಿಗಳ ಕೆಲಸವಲ್ಲ. ಪೋಷಕರು, ನಾಗರಿಕರೂ ಈ ಕೆಲಸಗಳಿಗೆ ಕೈಜೋಡಿಸಬೇಕು’ ಎಂದರು.

ನ್ಯಾಯವಾದಿ ಅಂಜನಾ ಕುಲಕರ್ಣಿ ಅವರು ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಬಗ್ಗೆ ಉಪನ್ಯಾಸ ನೀಡಿದರು. ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಂದ ಭಾಷಣ, ಕಿರು ನಾಟಕ ಪ್ರದರ್ಶಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿ ಕಚೇರಿಯಿಂದ ರಂಗ ಮಂದಿರದವರೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಜಾಗೃತಿ ಜಾಥಾ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಷಣ್ಮುಖಯ್ಯ ಬಿ.ಸ್ವಾಮಿ, ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಧನರಾಜ ಬಿರಾದಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ, ಜಿಲ್ಲಾ ಮಕ್ಕಳ ಸಮಿತಿ ಅಧ್ಯಕ್ಷ ಸೀಮಪ್ಪ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಬೀದರ್‌ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಅನಿಲ ಪಸರ್ಗೆ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಲಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಕಾನೂನಾತ್ಮಕ ಅಪರಾಧ. ಆದರೂ ಬಾಲಕಾರ್ಮಿಕ ಪದ್ಧತಿ ಕಂಡು ಬರುವುದು ವಿಷಾದಕರ.
– ಪ್ರಕಾಶ ಬನಸೋಡೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.