ADVERTISEMENT

ವಸತಿ ಯೋಜನೆ ಜಾರಿಯಲ್ಲಿ ಪಾರದರ್ಶಕತೆ ಇರಲಿ: ಸಚಿವ ವಿ.ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 23 ಡಿಸೆಂಬರ್ 2019, 12:37 IST
Last Updated 23 ಡಿಸೆಂಬರ್ 2019, 12:37 IST
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವಸತಿ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ವಿ.ಸೋಮಣ್ಣ ಮಾತನಾಡಿದರು. ರುದ್ರೇಶ ಘಾಳಿ, ಭಗವಂತ ಖೂಬಾ, ಪ್ರಭು ಚವಾಣ್‌, ರಹೀಂ ಖಾನ್, ಜ್ಞಾನೇಂದ್ರಕುಮಾರ ಗಂಗ್ವಾರ್‌ ಇದ್ದಾರೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ವಸತಿ, ತೋಟಗಾರಿಕೆ ಹಾಗೂ ರೇಷ್ಮೆ ಸಚಿವ ವಿ.ಸೋಮಣ್ಣ ಮಾತನಾಡಿದರು. ರುದ್ರೇಶ ಘಾಳಿ, ಭಗವಂತ ಖೂಬಾ, ಪ್ರಭು ಚವಾಣ್‌, ರಹೀಂ ಖಾನ್, ಜ್ಞಾನೇಂದ್ರಕುಮಾರ ಗಂಗ್ವಾರ್‌ ಇದ್ದಾರೆ   

ಬೀದರ್: ‘ಜಿಲ್ಲೆಯ ಅಧಿಕಾರಿಗಳು ವಸತಿ ಯೋಜನೆ ಅನುಷ್ಠಾನದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಬೇಕು. ವಿಧಾನಸಭಾ ಕ್ಷೇತ್ರವನ್ನು ಗುಡಿಸಲು ಮುಕ್ತವಾಗಿ ಗುರುತಿಸಿಕೊಳ್ಳುವಂತಾಗಲು ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು’ ಎಂದು ವಸತಿ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ವಿ.ಸೋಮಣ್ಣ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ, ಬಸವ ವಸತಿ ಯೋಜನೆ, ದೇವರಾಜು ಅರಸು ವಸತಿ ಯೋಜನೆ ಹಾಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆ ಸೇರಿದಂತೆ ವಿವಿಧ ಗ್ರಾಮೀಣ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

‘ಬೀದರ್ ಜಿಲ್ಲೆಗೆ ಹೆಚ್ಚಿನ ಮನೆಗಳನ್ನು ಮಂಜೂರು ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಮನವಿ ಮಾಡಿದರು.

ADVERTISEMENT

‘ಜಿಲ್ಲೆಯಲ್ಲಿ ಗ್ರಾಮೀಣ ವಸತಿ ಯೋಜನೆಗಳ ಪ್ರಗತಿ ತೃಪ್ತಿಕರವಾಗಿಲ್ಲ. ವಸತಿ ನಿರ್ಮಾಣದ ಕಾಮಗಾರಿಯು ಕಳಪೆ ಆಗಿದೆ ಎನ್ನುವ ದೂರುಗಳು ಕೇಳಿ ಬರುತ್ತಿವೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಒತ್ತಾಯಿಸಿದರು.

‘‌ಜಿಲ್ಲಾ ಪಂಚಾಯಿತಿ ಸಿಇಒ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸಿ ಗ್ರಾಮೀಣ ವಸತಿ ಯೋಜನೆಗಳ ಅನುಷ್ಠಾನದ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಪಡೆಯಲಾಗುವುದು. ಬಳಿಕ ನಿವೃತ್ತ ಕೆಎಎಸ್‌ ಅಧಿಕಾರಿಯಿಂದ ತನಿಖೆ ನಡೆಸಲಾಗುವುದು’ ಎಂದರು.

‘ಸಿಇಒ ಅವರು ನಿಖರ ಹಾಗೂ ವಿಸ್ತೃತ ವರದಿಯನ್ನು ಕೊಡಬೇಕು. ಶಾಸಕರು ಸಹ ಮಾಹಿತಿ ಕೊಡಬೇಕು’ ಎಂದರು.

ಶಾಸಕ ರಹೀಂ ಖಾನ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರ ಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಾವುಗೆ, ರೇಷ್ಮೆ ಇಲಾಖೆಯ ಅಧಿಕಾರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ವಿಜಯಕುಮಾರ ಮಡ್ಡೆ, ಮಕರಂದ ಕುಲಕರ್ಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.