ಕಮಲನಗರ: ಮಹಾರಾಷ್ಟ್ರದ ಧನ್ನೆಗಾಂವ್ ಜಲಾಶಯದಿಂದ ಮಾಂಜ್ರಾ ನದಿಗೆ ಅಪಾರ ಪ್ರಮಾಣದ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಂಗಮ ಕ್ರಾಸ್ ಬಳಿಯ ಮಾಂಜ್ರಾ ನದಿ ಉಕ್ಕಿ ಹರಿಯುತ್ತಿರುವ ಪರಿಣಾಮ ನದಿ ಪಾತ್ರದಲ್ಲಿ ಅಕ್ಷರಶ: ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
ಮಾಂಜ್ರಾ ನದಿ ಮೈದುಂಬಿ ಹರಿಯುತ್ತಿರುವುದನ್ನು ನೋಡಿ ಜನರು ಕಣ್ತುಂಬಿಕೊಳ್ಳುತ್ತಿದ್ದಾರೆ. ಮಾಂಜ್ರಾ ನದಿ ಪಕ್ಕದಲ್ಲಿರುವ ರೈತರ ಜಮೀನುಗಳು ಸಂಪೂರ್ಣ ಜಲಾವೃತಗೊಂಡಿವೆ.
ಸಂಗಮ, ನಿಡೋದಾ, ಬಳತ(ಕೆ), ಹಾಲಹಳ್ಳಿ, ರಕ್ಷ್ಯಾಳ, ಸಾವಳಿ, ಖೇಡ ಹಾಗೂ ಹಲವು ಗ್ರಾಮಗಳ ರೈತರ ಹೊಲಗಳಿಗೆ ನೀರು ನುಗ್ಗಿ ಉದ್ದು, ಹೆಸರು, ಸೋಯಾಬಿನ್, ತೊಗರಿ ಹಾಗೂ ಇನ್ನಿತರ ಬೆಳೆಗಳು ಸಂಪೂರ್ಣ ಹಾಳಾಗಿವೆ.
ಸೇತುವೆಗಳು ಜಲಾವೃತ: ಸಂಗಮ ಕ್ರಾಸ್-ಠಾಣಾಕುಶನೂರ ಮಧ್ಯದ ಬಳತ(ಕೆ) ಸೇತುವೆ, ಸಂಗಮ-ಖೇಡ್ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಕೂಡಲೇ ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಹಾನಿಗೀಡಾದ ಬೆಳೆಗಳ ಸಮೀಕ್ಷೆ ನಡೆಸಿ ಪರಿಹಾರ ದೊರಕಿಸಿಕೊಡಬೇಕೆಂದು ರೈತರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.