ADVERTISEMENT

8 ವರ್ಷಗಳಲ್ಲಿ ಬೀದರ್‌ನಲ್ಲಿ ಹಲವು ಅಭಿವೃದ್ಧಿ ಕಾರ್ಯ: ಕೇಂದ್ರ ಸಚಿವ ಖೂಬಾ

ದೇಶಕ್ಕೆ ಸಿಕ್ಕಿದ್ದು ಇಬ್ಬರು ಸಮರ್ಥ ಪ್ರಧಾನಿ ಮಾತ್ರ:

​ಪ್ರಜಾವಾಣಿ ವಾರ್ತೆ
Published 25 ಮೇ 2022, 15:09 IST
Last Updated 25 ಮೇ 2022, 15:09 IST
ಸಚಿವ ಭತವಂತ ಖೂಬಾ
ಸಚಿವ ಭತವಂತ ಖೂಬಾ   


ಬೀದರ್: ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದಿದ್ದರೂ, ಅಟಲ್ ಬಿಹಾರಿ ವಾಜಪೇಯಿ ಹಾಗೂ ನರೇಂದ್ರ ಮೋದಿ ಸೇರಿ ದೇಶಕ್ಕೆ ಸಿಕ್ಕಿದ್ದು ಇಬ್ಬರು ಸಮರ್ಥ ಪ್ರಧಾನಮಂತ್ರಿಗಳು ಮಾತ್ರ ಎಂದು ಕೇಂದ್ರದ ರಾಸಾಯನಿಕ ಹಾಗೂ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಪೂರೈಸಿದ ಸಂದರ್ಭದಲ್ಲಿ ಅವರು ಈ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಈ ಇಬ್ಬರು ಪ್ರಧಾನಿಗಳ ಅವಧಿಯಲ್ಲಿ ಬಹಳಷ್ಟು ಮಹತ್ವದ ಅಭಿವೃದ್ಧಿ ಕಾರ್ಯಗಳು ಆಗಿವೆ ಎಂದು ತಿಳಿಸಿದ್ದಾರೆ.
ಮೋದಿ ಅವರು ಕೋವಿಡ್ ಮೊದಲ ಹಾಗೂ ಎರಡನೇ ಅಲೆ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳನ್ನು ವಿಶ್ವ ಆರೋಗ್ಯ ಸಂಸ್ಥೆಯೇ ಭೇಷ್ ಎಂದಿದೆ. ಮೋದಿ ಅವರ ನೇತೃತ್ವದಲ್ಲಿ ಭಾರತಕ್ಕೆ ಜಾಗತಿಕಮಟ್ಟದಲ್ಲಿ ಸಿಗುತ್ತಿರುವ ಬೆಂಬಲಕ್ಕೆ ದೇಶದ ಜನ ಹೆಮ್ಮೆ ಪಡುತ್ತಿದ್ದಾರೆ ಎಂದು ಹೇಳಿದ್ದಾರೆ.
ತಾವು ಸಂಸದರಾದ ಎಂಟು ವರ್ಷಗಳ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದಲ್ಲೂ ಹಿಂದೆಂದೂ ಕಾಣದ ಅಭಿವೃದ್ಧಿ ಕೆಲಸಗಳಾಗಿವೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ರೂ. 3 ಸಾವಿರ ಕೋಟಿ ವೆಚ್ಚದಲ್ಲಿ 14 ಹೊಸ ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದೆ. ಮೂರು ಹೆದ್ದಾರಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಎರಡು ಹೊಸ ಹೆದ್ದಾರಿಗಳು ಮಂಜೂರಾಗಿದ್ದು, ಕೆಲವೇ ದಿನಗಳಲ್ಲಿ ಟೆಂಡರ್ ಆಗಲಿದೆ ಎಂದು ತಿಳಿಸಿದ್ದಾರೆ.
13 ಹೊಸ ರೈಲುಗಳು, ವಿದ್ಯುತ್ ಚಾಲಿತ ರೈಲುಗಳ ಸಂಚಾರ ಆರಂಭಗೊಂಡಿದೆ. ಬೀದರ್‍ನಿಂದ ನಾಗರಿಕ ವಿಮಾನಯಾನ ಸೇವೆ ಪ್ರಾರಂಭಗೊಂಡಿದೆ. ಪಾಸ್‍ಪೋರ್ಟ್ ಸೇವಾ ಕೇಂದ್ರ ಶುರುವಾಗಿದೆ ಎಂದು ಹೇಳಿದ್ದಾರೆ.
ಔರಾದ್‍ನಲ್ಲಿ ಸಿಪೆಟ್ ಸ್ಥಾಪನೆಗೆ ಸಿದ್ಧತೆ ನಡೆದಿದೆ. ಕೇಂದ್ರದ ಹಲವಾರು ಯೋಜನೆಗಳ ಲಾಭ ಜಿಲ್ಲೆಯ ಜನರಿಗೆ ದೊರೆತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.