ADVERTISEMENT

ಬೀದರ್: ಕೋವಿಡ್‍ ಮುಕ್ತ ಜಿಲ್ಲೆಗೆ ಮಾಸ್ಟರ್ ಪ್ಲಾನ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 15:34 IST
Last Updated 7 ಆಗಸ್ಟ್ 2021, 15:34 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಎಲ್ಲ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯನ್ನು ಕೋವಿಡ್‍ಮುಕ್ತಗೊಳಿಸಲು ಮಾಸ್ಟರ್ ಪ್ಲಾನ್ ಮಾಡಲಾಗುವುದು ಎಂದು ಸಚಿವ ಪ್ರಭು ಚವಾಣ್ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ತುರ್ತು ಸಭೆಯಲ್ಲಿ ಅವರು ಮಾತನಾಡಿದರು.

ಮಹಾರಾಷ್ಟ್ರ ಹಾಗೂ ತೆಲಂಗಾಣ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗೆ ಕೋವಿಡ್ ಮೂರನೇ ಅಲೆ ಬಾಧಿಸದಂತೆ ನೋಡಿಕೊಳ್ಳುವುದು ತಮ್ಮ ಮೊದಲ ಆದ್ಯತೆಯಾಗಿದೆ ಎಂದು ಹೇಳಿದರು.

ADVERTISEMENT

ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಚೆಕ್‍ಪೋಸ್ಟ್ ಸ್ಥಾಪನೆ, ಕೋವಿಡ್ ತಪಾಸಣೆ, ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸೇರಿದಂತೆ ಕೋವಿಡ್ ತಡೆಗೆ ಹಿಂದಿನಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಶಾಸಕ ಈಶ್ವರ ಖಂಡ್ರೆ ಮಾತನಾಡಿ, ಕೋವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. ಹೀಗಾಗಿ ಅಗತ್ಯ ತಜ್ಞ ವೈದ್ಯರು, ಆಮ್ಲಜನಕ ಲಭ್ಯತೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್ ಮಾತನಾಡಿ, ವಾರಾಂತ್ಯದ ಕರ್ಫ್ಯೂ ಹಾಗೂ ರಾತ್ರಿ ಕರ್ಫ್ಯೂ ಸರಿಯಾಗಿ ಜಾರಿಗೊಳಿಸಬೇಕು ಎಂದು ಹೇಳಿದರು.

ಕಮಲನಗರ ತಾಲ್ಲೂಕಿನಲ್ಲಿ 4, ಔರಾದ್ ತಾಲ್ಲೂಕಿನಲ್ಲಿ 2 ಸೇರಿ ಜಿಲ್ಲೆಯ ಮಹಾರಾಷ್ಟ್ರ ಗಡಿಯಲ್ಲಿ ಆರು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.

ಆಗಸ್ಟ್ 16 ರ ವರೆಗೆ ವಾರಾಂತ್ಯ ಮತ್ತು ರಾತ್ರಿ ಕರ್ಫ್ಯೂ ಇರಲಿದೆ. ಇದನ್ನು ಜಿಲ್ಲೆಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಹೇಳಿದರು.

ಮಳೆ ಹಾನಿ ಪರಿಹಾರ ಕಾರ್ಯ, ಜಿಲ್ಲಾ ಆಡಳಿತ ಕಚೇರಿಗಳ ಸಂಕೀರ್ಣ ನಿರ್ಮಾಣದ ಬಗೆಗೂ ಸಭೆಯಲ್ಲಿ ಚರ್ಚೆ ನಡೆಯಿತು.

ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಶಾಸಕರಾದ ರಹೀಂಖಾನ್, ಶರಣು ಸಲಗರ, ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ, ಬಿಡಿಎ ಅಧ್ಯಕ್ಷ ಬಾಬುವಾಲಿ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಕೆಲಸ ಮಾಡದಿದ್ದರೆ ಜಾಗ ಖಾಲಿ ಮಾಡಿ
ಬೀದರ್:
ಕೆಲಸ ಮಾಡಲು ಆಸಕ್ತಿ ಇಲ್ಲದ ಅಧಿಕಾರಿಗಳು ಜಿಲ್ಲೆಯಿಂದ ಜಾಗ ಖಾಲಿ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಬೇಕು. ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರುವ ಹಾಗೂ ಅಸಂಬದ್ಧ ಮಾಹಿತಿ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶನಿವಾರ ಇಲ್ಲಿ ನಡೆದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯಲ್ಲಿ ಕಡಕ್ ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.