ADVERTISEMENT

ಬೆಳೆ ಹಾನಿ ಸಮೀಕ್ಷೆ ಸಮರ್ಪಕವಾಗಿ ನಡೆಸಿ

ದಿಶಾ ಸಭೆಯಲ್ಲಿ ಅಧಿಕಾರಿಗಳಿಗೆ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಸೂಚನೆ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 5:21 IST
Last Updated 21 ಮಾರ್ಚ್ 2023, 5:21 IST
ಬೀದರ್‌ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿದರು
ಬೀದರ್‌ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯಲ್ಲಿ ಕೇಂದ್ರ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಮಾತನಾಡಿದರು   

ಬೀದರ್‌: ‘ಅಕಾಲಿಕ ಮಳೆಯಿಂದ ಹಾನಿಗೊಳಗಾದ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಸಮೀಕ್ಷೆಯನ್ನು ಸರಿಯಾಗಿ ನಡೆಸಬೇಕು ಹಾಗೂ ನಿಖರವಾದ ವರದಿ ಕೊಡಬೇಕು’ ಎಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಮೂರು ದಿನ ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಅಪಾರ ಬೆಳೆ ಹಾನಿಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ರೈತರಿಗೆ ಬೆಳೆ ವಿಮೆ ದೊರಕಿಸಿಕೊಡಲು ಅನುಕೂಲವಾಗುವಂತೆ ಸರಿಯಾಗಿ ಸಮೀಕ್ಷೆ ನಡೆಸಬೇಕು’ ಎಂದು ಹೇಳಿದರು.

ADVERTISEMENT

‘ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲಾಡಳಿತದೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಕಾಮಗಾರಿಗಳ ಗುಣಮಟ್ಟ ನಿರ್ಧರಿಸಬಾರದು. ಒಂದು ವೇಳೆ ಹಾಗೆ ಮಾಡಿರುವುದು ಕಂಡು ಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಹುದ್ದೆಯಿಂದ ಬಿಡುಗಡೆಗೊಳಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಮಳೆಯಿಂದ ಹಾನಿಗೊಳದ ಪ್ರದೇಶದ ಪ್ರಾಥಮಿಕ ಸಮೀಕ್ಷೆ ನಡೆಸಿದ ಸಂದರ್ಭದಲ್ಲಿ ಹುಮನಾಬಾದ್‌ನ ಹುಡಗಿ, ನಂದಗಾವ, ಹಿಪ್ಪರಗಿ, ಕಪ್ಪರಗಾಂವ, ಬೀದರ್ ತಾಲ್ಲೂಕಿನ ಹೊನ್ನಡ್ಡಿ, ಮಲ್ಕಾಪುರ, ಚಟ್ನಳ್ಳಿ ಪರಿಸರದಲ್ಲಿ ಹೆಚ್ಚಿನ ಹಾನಿಯಾಗಿರುವ ಮಾಹಿತಿ ಇದೆ. ಇನ್ನೊಮ್ಮೆ ವೈಜ್ಞಾನಿಕವಾಗಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಳೆದ ಬಾರಿ ದಿಶಾ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್ ನೀಡಿ ಉತ್ತರ ಪಡೆಯದ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಸಚಿವರು, ಅವರಿಗೂ ಒಂದು ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯಿತಿ ಸಿಇಒ ಶಿಲ್ಪಾ ಅವರಿಗೆ ಸೂಚಿಸಿದರು.

ತೋಟಗಾರಿಕೆ, ಆರೋಗ್ಯ, ಲೋಕೋಪಯೋಗಿ, ಶಿಕ್ಷಣ ಇಲಾಖೆ ಹಾಗೂ ಜೆಸ್ಕಾಂ ಪ್ರಗತಿ ಪರಿಶೀಲನೆ ನಡೆಸಿದರು.

ವಿಧಾನ ಪರಿಷತ ಸದಸ್ಯ ಅರವಿಂದಕುಮಾರ ಅರಳಿ ಮಾತನಾಡಿ, ‘ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ದೂರು ಕೊಟ್ಟರೂ ಪತ್ರ ಕಳಿಸಿಕೊಟ್ಟು ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿದ್ದಾರೆ. ಅಧಿಕಾರಿ
ಗಳಲ್ಲಿನ ಇಂಥ ಪ್ರವೃತ್ತಿ ಬದಲಾಗಬೇಕು’ ಎಂದು ಹೇಳಿದರು.

ಬೀದರ್ ಶಾಸಕ ರಹೀಂ ಖಾನ್, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ, ದಿಶಾ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ, ವಿವಿಧ ಇಲಾಖೆಗಳ ಉಪನಿರ್ದೇಶಕರು ಹಾಗೂ ಸಹಾಯಕ ನಿರ್ದೇಶಕರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.