ಬೀದರ್: ಹುಮನಾಬಾದ್ ತಾಲ್ಲೂಕಿನ ಮೋಳಕೇರಾ ಗ್ರಾಮದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಗಾಯಗೊಂಡು ನಗರದ ಬ್ರಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಮಕ್ಕಳನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಭಾನುವಾರ ಭೇಟಿ ಮಾಡಿದರು.
ಗಾಯಾಳುಗಳ ಆರೋಗ್ಯ ವಿಚಾರಿಸಿ ಸಾಂತ್ನನ ಹೇಳಿದರು. ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಖಂಡ್ರೆ, ಸ್ಫೋಟದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು ಆರು ಜನ ಗಾಯಗೊಂಡಿದ್ದಾರೆ. ಅವರಿಗೆ ಜಿಲ್ಲಾಡಳಿತದಿಂದ ಉತ್ತಮ ಚಿಕಿತ್ಡೆ ಕೊಡಲಾಗುತ್ತಿದೆ. ಆಸ್ಪತ್ರೆಯ ಸಂಪೂರ್ಣ ವೆಚ್ಚ ಜಿಲ್ಲಾಡಳಿತ ಭರಿಸಲಿದೆ. ಈಗಾಗಲೇ ಆರೋಪಿಗಳನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಹೇಳಿದರು.
ಘಟನೆಯಲ್ಲಿ ಯಾರೇ ಶಾಮಿಲಾಗಿದ್ದರೂ ಅವರ ವಿರುದ ಕಾನೂನು ಕ್ರಮ ಜರುಗಿಸಲಾಗುವುದು. ತನಿಖೆ ಪ್ರಗತಿಯಲ್ಲಿದೆ. ಘಟನೆ ಸಂಬಂಧ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಎಲ್ಲ ಮಾಹಿತಿ ಹಂಚಿಕೊಂಡಿದ್ದೇನೆ ಎಂದರು.
ಪೌರಾಡಳಿತ ಸಚಿವ ರಹೀಂ ಖಾನ್, ಮಾಜಿಸಚಿವ ರಾಜಶೇಖರ್ ಪಾಟೀಲ್ ಹುಮನಾಬಾದ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಹಾಜರಿದ್ದರು.
ಮೋಳಕೇರಾ ಗ್ರಾಮದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಜನ ಗಾಯಗೊಂಡಿದ್ದರು. ಮೂವರು ಮಕ್ಕಳು ಬ್ರಿಮ್ಸ್, ಇನ್ನೊಬ್ಬ ಅಪ್ರಾಪ್ತನಿಗೆ ಖಾಸಗಿ ಆಸ್ಪತ್ರೆ ಹಾಗೂ ಇಬ್ಬರು ವಯಸ್ಕರಿಗೆ ಕ್ರಮವಾಗಿ ಹೈದರಾಬಾದ್ ಹಾಗೂ ಸೊಲ್ಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.