ADVERTISEMENT

ಓಮಿಕ್ರಾನ್: ಕಟ್ಟೆಚ್ಚರ ವಹಿಸಲು ಸಚಿವ ಪ್ರಭು ಚವಾಣ್ ಸೂಚನೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 14:34 IST
Last Updated 29 ನವೆಂಬರ್ 2021, 14:34 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಓಮಿಕ್ರಾನ್ ಹಾಗೂ ಕೋವಿಡ್ 3ನೇ ಅಲೆ ಬರುವ ಮೊದಲೇ ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ.

ಕೇರಳದಲ್ಲಿ ಹೊಸ ರೂಪಾಂತರಿ ವೈರಸ್ ಪತ್ತೆಯಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅದರಂತೆ ತೆಲಂಗಾಣಾ ಹಾಗೂ ಮಹಾರಾಷ್ಟ್ರ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ಬೀದರ್‌ ಜಿಲ್ಲೆಯಲ್ಲಿ ಸೋಂಕು ಹರಡದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಗಡಿಯಲ್ಲಿ ದಿನ 24 ಗಂಟೆಯೂ ಚೆಕ್‌ಪೋಸ್ಟ್‌ಗಳು ಕಾರ್ಯನಿರ್ವಹಿಸಬೇಕು. ಹೊರ ರಾಜ್ಯಗಳಿಂದ ಜಿಲ್ಲೆಗೆ ಬರುವ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಬೇಕು. ಕೋವಿಡ್ ಪರೀಕ್ಷೆಯ ವರದಿ ‍ಪರಿಶೀಲಿಸಿದ ನಂತರವೇ
ಜಿಲ್ಲೆಯೊಳಗೆ ಪ್ರವೇಶಕ್ಕೆ ಅವಕಾಶ ನೀಡಬೇಕು. ಸೋಂಕು ನಿಯಂತ್ರಣಕ್ಕೆ ಸರ್ಕಾರದ ಎಲ್ಲಾ ಮಾರ್ಗಸೂಚಿಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸಚಿವರು ಸೂಚಿಸಿದ್ದಾರೆ.

ADVERTISEMENT

ಇನ್ನೂ ಲಸಿಕೆ ಪಡೆಯದವರು ಕೂಡಲೇ ಸ್ವಯಂ ಪ್ರೇರಿತವಾಗಿ ಲಸಿಕೆ ಪಡೆಯಬೇಕು. ಹಳ್ಳಿ ಪ್ರದೇಶಗಳಲ್ಲಿ ಲಸಿಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಬೇಕು. ವೈದ್ಯಕೀಯ ಸಿಬ್ಬಂದಿ ಮನೆ-ಮನೆಗೆ ತೆರಳಿ ಲಸಿಕೆ ನೀಡಬೇಕು ಎಂದು ಸಚಿವರು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.