ADVERTISEMENT

27ಕ್ಕೆ ಕಂದಾಯ ಸಚಿವರ ಗ್ರಾಮ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 25 ಮೇ 2022, 4:01 IST
Last Updated 25 ಮೇ 2022, 4:01 IST
ಕಂದಾಯ ಇಲಾಖೆ ಸಚಿವ ಆರ್. ಅಶೋಕ ಅವರ ಗ್ರಾಮ ವಾಸ್ತವ್ಯ ನಿಗದಿಯಾದ ಹಿನ್ನೆಲೆಯಲ್ಲಿ ಮಂಗಳವಾರ ವಡಗಾಂವ್ ಗ್ರಾಮಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಭೇಟಿ ನೀಡಿ ಪರಿಶೀಲಿಸಿದರು
ಕಂದಾಯ ಇಲಾಖೆ ಸಚಿವ ಆರ್. ಅಶೋಕ ಅವರ ಗ್ರಾಮ ವಾಸ್ತವ್ಯ ನಿಗದಿಯಾದ ಹಿನ್ನೆಲೆಯಲ್ಲಿ ಮಂಗಳವಾರ ವಡಗಾಂವ್ ಗ್ರಾಮಕ್ಕೆ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಭೇಟಿ ನೀಡಿ ಪರಿಶೀಲಿಸಿದರು   

ಔರಾದ್: ಮುಂದೂಡಲಾಗಿದ್ದ ಕಂದಾಯ ಸಚಿವ ಆರ್. ಅಶೋಕ ಅವರ ಗ್ರಾಮ ವಾಸ್ತವ್ಯ ಮೇ 27ರಂದು ವಡಗಾಂವ್ ಗ್ರಾಮದಲ್ಲಿ ನಿಗದಿಯಾಗಿದೆ.

ಈ ಹಿನ್ನೆಲೆಯಲ್ಲಿ ಪಶು ಸಂಗೋಪನೆ ಸಚಿವ ಪ್ರಭು ಚವಾಣ್ ಮಂಗಳವಾರ ವಡಗಾಂವ್ ಗ್ರಾಮದಲ್ಲಿ ಸಭೆ ನಡೆಸಿ, ಒಂದು ಸಣ್ಣ ಲೋಪ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಗ್ರಾಮ ವಾಸ್ತವ್ಯ ಕೇವಲ ಒಂದು ಹೋಬಳಿಗೆ ಸಂಬಂಧಿಸಿದ್ದಲ್ಲ. ತಾಲ್ಲೂಕಿನ ಎಲ್ಲ ಗ್ರಾಮಗಳ ಜನರಿಗೆ ಈ ಬಗ್ಗೆ ಮಾಹಿತಿ ನೀಡಬೇಕು. ಈ ಕಾರ್ಯಕ್ರಮ ಯಶಸ್ವಿಗೆ ಎಲ್ಲ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದ ವೇದಿಕೆ, ಅಹವಾಲು ಸ್ವೀಕಾರ, ಸಾರ್ವಜನಿಕರಿಗೆ ಕುಡಿಯುವ ನೀರು, ಊಟದ ವ್ಯವಸ್ಥೆ ಎಲ್ಲವೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ADVERTISEMENT

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು ಎನ್ನುವುದು ಸರ್ಕಾರದ ಮಹಾ ಸಂಕಲ್ಪದ ಹಿನ್ನೆಲೆಯಲ್ಲಿ ಈ ಗ್ರಾಮ ವಾಸ್ತವ್ಯ ನಡೆಯುತ್ತಿದೆ. ಜನರು ಸಣ್ಣ ಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಅಲೆದಾಡುವಂತೆ ಆಗಬಾರದು. ಜನರ ಸಮಸ್ಯೆಗಳನ್ನು ತಿಳಿದುಕೊಳ್ಳಲು ಸರ್ಕಾರವೇ ಮನೆ ಬಾಗಿಲಿಗೆ ಬರಲಿದೆ. ಕಂದಾಯ ಇಲಾಖೆಯ ಪಹಣಿ ಸಮಸ್ಯೆ, ಮಾಶಾಸನ ಸಮಸ್ಯೆ, ಜಾತಿ, ಆದಾಯ ಪ್ರಮಾಣ ಪತ್ರಗಳು ಸೇರಿದಂತೆ ವಿವಿಧ ರೀತಿಯ ಸೇವೆಗಳನ್ನು ನೀಡುವಲ್ಲಿ ವಿಳಂಬದಂತಹ ಹತ್ತು ಹಲವು ಸಮಸ್ಯೆಗಳನ್ನು ಆಲಿಸಲಾಗುತ್ತದೆ. ಸ್ಥಳದಲ್ಲಿಯೇ ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು.

ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ತಹಶೀಲ್ದಾರ್ ಅರುಣಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಇಒ ಬೀರೇಂದ್ರಸಿಂಗ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ತ್ರಿಶೂಲಾಬಾಯಿ, ಪಶು ವೈದ್ಯಕೀಯ ಆಡಳಿತ ಮಂಡಳಿ ಸದಸ್ಯ ವಸಂತ ವಕೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.