ADVERTISEMENT

ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಸಚಿವ ಪ್ರಭು ಚವಾಣ್ ಸೂಚನೆ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2020, 16:21 IST
Last Updated 1 ಅಕ್ಟೋಬರ್ 2020, 16:21 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್: ಹೆಚ್ಚಿನ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೆರೆ, ಬಾವಿಗಳು ಭರ್ತಿಯಾಗಿವೆ. ರಸ್ತೆಗಳು ಹಾಳಾಗಿವೆ. ಅಲ್ಲಲ್ಲಿ ಚರಂಡಿಗಳು ತುಂಬಿಕೊಂಡಿವೆ. ಪಿಡಿಒಗಳು ಗಮನ ಹರಿಸುತ್ತಿಲ್ಲ ಎಂದು ದೂರು ಪೆಟ್ಟಿಗೆಗೆ ದೂರುಗಳು ಬರುತ್ತಿದ್ದು, ಕೂಡಲೇ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಪಿಡಿಒಗಳಿಗೆ ಸೂಚಿಸಿದ್ದಾರೆ.

ಚರಂಡಿಗಳನ್ನು ಶುಚಿಗೊಳಿಸದಿದ್ದರೆ ಸೊಳ್ಳೆಗಳ ಕಾಟ ಹೆಚ್ಚಾಗಿ, ಮಲೇರಿಯಾ, ಡೆಂಗಿಯಂತಹ ಸಾಂಕ್ರಾಮಿಕ ರೋಗಗಳು ಹರಡುತ್ತವೆ. ಹೀಗಾಗಿ ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.

ಸರಿಯಾಗಿ ಕರ್ತವ್ಯ ನಿರ್ವಹಿಸದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

ADVERTISEMENT

ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಇರುವ ಕುಡಿಯುವ ನೀರಿನ ತೆರೆದ ಬಾವಿಗಳಿಗೆ ಬ್ಲೀಚಿಂಗ್ ಪೌಡರ್ ಹಾಕಬೇಕು. ಚರಂಡಿಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಬೇಕು. ಯಾವುದೇ ಗ್ರಾಮಗಳಲ್ಲಿ ಕೊಳಚೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಓಡಾಡುವ ರಸ್ತೆಗಳಲ್ಲಿ ಕೆಸರು ತುಂಬಿಕೊಂಡಿದ್ದರೆ ಕೂಡಲೇ ತೆರವುಗೊಳಿಸಬೇಕು ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 10-12 ಪಿಡಿಒಗಳ ವಿರುದ್ಧ ಕರ್ತವ್ಯ ನಿರ್ಲಕ್ಷ್ಯದ ದೂರುಗಳಿವೆ. ಮುಂದಿನ ದಿನಗಳಲ್ಲಿ ದೂರುಗಳು ಪುನರಾವರ್ತನೆಯಾದಲ್ಲಿ ಅಂಥವರನ್ನು ಯಾವುದೇ ಮುಲಾಜಿಲ್ಲದೆ ಅಮಾನತುಗೊಳಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದ್ದಾರೆ.

ಅಧಿಕಾರಿಗಳು ಜನಹಿತದ ದೃಷ್ಟಿಕೋನದಿಂದ ಕೆಲಸ ಮಾಡಬೇಕು. ಗ್ರಾಮಗಳಿಗೆ ಪಿಡಿಒಗಳು ಭೇಟಿ ಕೊಡದಿದ್ದಲ್ಲಿ, ಮೂಲಭೂತ ಸೌಕರ್ಯ ಒದಗಿಸಲು ವಿಫಲರಾದಲ್ಲಿ ಸಾರ್ವಜನಿಕರು ತಮ್ಮ ಗಮನಕ್ಕೆ ತರಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.