ADVERTISEMENT

ಬೀದರ್‌ ನೌಬಾದ್‌ನಲ್ಲಿ ಸುಸಜ್ಜಿತ ಕ್ರೀಡಾಂಗಣ

ರೇಷ್ಮೆ ಇಲಾಖೆಯ ಜಾಗದಲ್ಲಿ ಬರಲಿದೆ ಹೊಸ ಮೈದಾನ–ಸಚಿವ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 7:29 IST
Last Updated 2 ನವೆಂಬರ್ 2025, 7:29 IST
ಈಶ್ವರ ಬಿ. ಖಂಡ್ರೆ
ಈಶ್ವರ ಬಿ. ಖಂಡ್ರೆ   

ಬೀದರ್‌: ‘ನಗರದ ನೌಬಾದ್‌ ಸಮೀಪದ ರೇಷ್ಮೆಇಲಾಖೆಯ ಜಾಗದಲ್ಲಿ ಸುಸಜ್ಜಿತವಾದ ಕ್ರೀಡಾಂಗಣ ನಿರ್ಮಿಸಲು ತೀರ್ಮಾನಿಸಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದರು.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ರೀಡಾಂಗಣ ನಿರ್ಮಾಣಕ್ಕೆ 25 ಎಕರೆ ಜಾಗ ಬೇಕಿದೆ. ಈಗಾಗಲೇ ಎರಡ್ಮೂರು ಜಾಗ ಪರಿಶೀಲಿಸಿದ್ದೇನೆ. ರೇಷ್ಮೆ ಇಲಾಖೆಯ ಜಾಗ ಸೂಕ್ತವೆನಿಸಿದೆ. ಕೆಕೆಆರ್‌ಡಿಬಿಯಿಂದ ಹತ್ತು ಕೋಟಿ ಮಂಜೂರು ಮಾಡಲಾಗಿದೆ ಎಂದರು.

ಈ ಸಂಬಂಧ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗುವುದು. ಸರ್ಕಾರದಿಂದಲೂ ಅನುದಾನ ಒದಗಿಸಲಾಗುವುದು. ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಂಗಣ ನಿರ್ಮಿಸಿ, ಕ್ರೀಡಾಪಟುಗಳಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಹೇಳಿದರು.

ADVERTISEMENT

ರೇಷ್ಮೆ ಇಲಾಖೆಯವರಿಗೆ ಅಲ್ಲಿಯೇ ಜಾಗ ಕೊಡಲಾಗುವುದು. ಈಗಿರುವ ನೆಹರೂ ಕ್ರೀಡಾಂಗಣವನ್ನು ಪೂರ್ಣ ಪ್ರಮಾಣದಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಬಳಸಿಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೃಷಿ ವಿಜ್ಞಾನ ಕೇಂದ್ರ ಏಕೆ ಮುಚ್ಚಿದ್ದಾರೆ ಎಂಬ ವಿಷಯ ನನ್ನ ಗಮನಕ್ಕೆ ಬಂದಿಲ್ಲ. ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದರ ಬಗ್ಗೆ ಮಾಹಿತಿ ಪಡೆದು, ಕೃಷಿ ಸಚಿವರೊಂದಿಗೆ ಚರ್ಚೆ ನಡೆಸಿ, ಪುನಃ ಆರಂಭಿಸಲಾಗುವುದು. ಉದ್ದೇಶಪೂರ್ವಕವಾಗಿ ಬೀಗ ಹಾಕಿದ್ದರೆ ಕ್ರಮ ಜರುಗಿಸಲಾಗುವುದು ಎಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಬಿಡಿಎ ಅಕ್ರಮ; ತಪ್ಪಿತಸ್ಥರ ವಿರುದ್ಧ ಕ್ರಮ

ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಅಕ್ರಮದ ಮೇಲ್ವಿಚಾರಣೆಯನ್ನು ನಗರಾಭಿವೃದ್ಧಿ ಇಲಾಖೆ ಮಾಡುತ್ತಿದೆ. ಅದರ ಬಗ್ಗೆ ಇಲಾಖೆ ಕ್ರಮ ಕೈಗೊಳ್ಳಲಿದೆ. ಒಂದುವೇಳೆ ಅವರು ಕ್ರಮ ಕೈಗೊಳ್ಳದಿದ್ದರೆ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆ ಶಿಫಾರಸು ಮಾಡಲಾಗುವುದು ಎಂದು ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ಬೀದರ್‌ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಅಕ್ರಮ ನಡೆದಿದೆ ಎಂದು ತನಿಖಾ ಸಮಿತಿಯ ವರದಿಯಲ್ಲಿ ತಿಳಿಸಲಾಗಿದೆ. ಹೀಗಿದ್ದರೂ ಸರ್ಕಾರವೇಕೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.