ADVERTISEMENT

ಆರೋಗ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ: ಕ್ರಮಕ್ಕೆ ಶಾಸಕ ಈಶ್ವರ ಖಂಡ್ರೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 16:52 IST
Last Updated 27 ಏಪ್ರಿಲ್ 2021, 16:52 IST
ಈಶ್ವರ ಖಂಡ್ರೆ
ಈಶ್ವರ ಖಂಡ್ರೆ   

ಭಾಲ್ಕಿ: ಜಿಲ್ಲೆಯ ಆರೋಗ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೂರಾರು ಕೋವಿಡ್ ರೋಗಿಗಳ ಜೀವ ಅಪಾಯಕ್ಕೆ ಸಿಲುಕಿದ್ದು, ಜಿಲ್ಲಾಡಳಿತ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಆಗ್ರಹಿಸಿದ್ದಾರೆ.

ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿರುವ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಅತಿರೇಕಕ್ಕೆ ಹೋಗುತ್ತಿರುವ ಕಾರಣ ಸೋಂಕು ನಿಯಂತ್ರಣ ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಖಾತರಿಪಡಿಸುವ ಕುರಿತು ಕಳೆದ 10 ದಿನಗಳಿಂದ ಜಿಲ್ಲಾಡಳಿತ ಜತೆಗೆ ಸತತ ಸಂಪರ್ಕದಲ್ಲಿದ್ದೇನೆ. ಅಗತ್ಯ ವೈದ್ಯಕೀಯ ಸೌಲಭ್ಯ ಹಾಗೂ ಔಷಧ ವ್ಯವಸ್ಥೆ ಮಾಡುವಂತೆ ಚರ್ಚಿಸುತ್ತಲೇ ಇದ್ದೇನೆ ಎಂದು ತಿಳಿಸಿದ್ದಾರೆ.

ಕೆಡಿಪಿ ಸಭೆಯಲ್ಲೂ ಪ್ರಸ್ತಾಪ ಮಾಡಿದ್ದೇನೆ. ವಿಷಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೂ ತಂದಿದ್ದೇನೆ. ಕೊರತೆ ಪುನರಾವರ್ತನೆಯಾಗದಂತೆ ಆಗ್ರಹಿಸಿದ್ದೇನೆ. ಆದರೂ. ಜಿಲ್ಲಾ ಆರೊಗ್ಯ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ADVERTISEMENT

ಬ್ರಿಮ್ಸ್‍ನಲ್ಲಿ ಏಪ್ರಿಲ್ 18 ರಂದು ರೆಮ್‍ಡಿಸಿವಿರ್ ಚುಚ್ಚುಮದ್ದಿನ ಅಭಾವ ಉಂಟಾಗಿತ್ತು. 19 ರಂದು 200 ಸೋಂಕಿತರಿಗೆ ಮೊದಲ ಡೋಸ್, ಎರಡನೇ ಡೋಸ್, ಮೂರನೇ ಡೋಸ್, ನಾಲ್ಕನೇ ಡೋಸ್ ಹಾಗೂ ಐದನೇ ಡೋಸ್ ತಪ್ಪಿಸಿದ್ದಾರೆ. ಕೋವಿಡ್ ನಿಯಂತ್ರಣ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಬರುವ ದಿನಗಳಲ್ಲಿ ಈ ರೀತಿ ಆಗದಂತೆ ಕ್ರಮ ವಹಿಸಲು ಆಗ್ರಹಿಸಿದ್ದೇನೆ ಎಂದು ತಿಳಿಸಿದ್ದಾರೆ.

ಆರೋಗ್ಯ ಸಚಿವರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿ ಜತೆ ಮಾತನಾಡಿದ್ದೇನೆ. ರಾಜ್ಯದಲ್ಲಿ ರೆಮಿಡಿಸಿರ್ ಕೊರತೆಯಲ್ಲ ಎಂದು ಮಾಹಿತಿ ನೀಡಿದ್ದಾರೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ದಾಖಲಾಗಿರುವ 480 ರೋಗಿಗಳ ಪೈಕಿ, 300 ಕ್ಕೂ ಹೆಚ್ಚು ಜನರಿಗೆ ರೆಮಿಡಿಸಿವೀರ್ ಸಿಕ್ಕಿಲ್ಲ ಎಂದ ಆರೋಪಿಸಿದ್ದಾರೆ.

ಆರೋಗ್ಯ ಸೇವೆಯಲ್ಲಿನ ಅವ್ಯವಸ್ಥೆಗೆ ಜಿಲ್ಲಾ ಆರೋಗ್ಯ ಇಲಾಖೆ ನೇರ ಹೊಣೆಯಾಗಿದೆ. ಇಷ್ಟೆಲ್ಲ ಅವ್ಯವಸ್ಥೆ ಇದ್ದರೂ ಯಾವುದೇ ಕ್ರಮ ಕೈಗೊಳ್ಳದೇ ಇರುವುದು ಕಳವಳಕಾರಿಯಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಆರೋಗ್ಯ ತುರ್ತುಸ್ಥಿತಿ ಎಂದು ಪರಿಗಣಿಸಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ, ಔಷಧ ಲಭ್ಯವಾಗುವಂತೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.