ಬೀದರ್: ಭಾಲ್ಕಿ ತಾಲ್ಲೂಕಿನ ವಸತಿ ಯೋಜನೆ ಅರ್ಹ ಫಲಾನುಭವಿಗಳ ಮನೆಗಳ ಜಿಪಿಎಸ್ ಮಾಡಲು ವಸತಿ ಸಚಿವ ವಿ. ಸೋಮಣ್ಣ ಅವರು ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.
ಕಾಲಹರಣ ಮಾಡುವ ಪಿಡಿಒಗಳು ಹಾಗೂ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆಯನ್ನೂ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ವಸತಿ ಯೋಜನೆಯಲ್ಲಿ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದನ್ನೇ ನೆಪ ಮಾಡಿಕೊಂಡು ಅಧಿಕಾರಿಗಳು ಅರ್ಹ ಫಲಾನುಭವಿಗಳ ಮನೆಗಳ ಜಿಪಿಎಸ್ ಮಾಡುತ್ತಿಲ್ಲ. ವಿನಾಕಾರಣ ವಿಳಂಬ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದಾರೆ. ಹಣ ಬಿಡುಗಡೆಯಾಗದ ಕಾರಣ ಫಲಾನುಭವಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಸಚಿವರ ಗಮನ ಸೆಳೆದಿದ್ದೇನೆ ಎಂದು ತಿಳಿಸಿದ್ದಾರೆ.
ಇದೀಗ ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿಗೆ ಸರ್ಕಾರದಿಂದ ತಲಾ 20 ಮನೆಗಳು ಮಂಜೂರಾಗಿವೆ. ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ವಸತಿ ರಹಿತ ಅರ್ಹರಿಗೆ ಮನೆ ಹಂಚಿಕೆ ಮಾಡಬೇಕು ಎಂದು ಹೇಳಿದ್ದಾರೆ.
ಯಾರಾದರೂ ಒತ್ತಡ ಹೇರಿದ್ದಲ್ಲಿ ಅಧಿಕಾರಿಗಳು ತಮ್ಮ ಗಮನಕ್ಕೆ ತರಬೇಕು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಂದ ತಪ್ಪು ಮಾಡಿಸುವವರು, ಆರೋಪ ಬಂದಾಗ ಅಧಿಕಾರಿಗಳ ಜತೆಗೆ ಇರುವುದಿಲ್ಲ ಎಂದು ಕಿವಿಮಾತು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.