
ಶ್ರೀಮಂಡಲ್(ಜನವಾಡ): ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಸುತ್ತುಗೋಡೆ, ಆಟದ ಮೈದಾನ, ಶೌಚಾಲಯ ಸೇರಿದಂತೆ ವಿವಿಧ ಮೂಲಸೌಕರ್ಯ ಕಾಮಗಾರಿಗಳನ್ನೂ ಕೈಗೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಹೇಳಿದರು.
ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮದಲ್ಲಿ ಶುಕ್ರವಾರ ನಡೆದ ಮಕ್ಕಳ ಹಕ್ಕುಗಳ ವಿಶೇಷ ಗ್ರಾಮಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಸಂಬಂಧಿಸಿದ ಅಧಿಕಾರಿಗಳು ಮಕ್ಕಳ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸಬೇಕು. ಮಕ್ಕಳ ಹಕ್ಕಳ ರಕ್ಷಣೆಯಲ್ಲಿ ಸರ್ಕಾರದ ಜತೆಗೆ ಸಮುದಾಯದ ಪಾತ್ರವೂ ಬಹಳ ಮಹತ್ವದ್ದಾಗಿದೆ ಎಂದು ಹೇಳಿದರು.
ಮಕ್ಕಳ ಹಕ್ಕುಗಳ ಜಾಗೃತಿಗೆ ಮಕ್ಕಳ ಗ್ರಾಮಸಭೆ ಹಮ್ಮಿಕೊಳ್ಳಲಾಗಿದೆ. ಸಭೆಯಲ್ಲಿ ಪ್ರಸ್ತಾಪವಾಗುವ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ ತಿಳಿಸಿದರು.
ತಾಲ್ಲೂಕು ಪಂಚಾಯಿತಿ ನರೇಗಾ ಸಹಾಯಕ ನಿರ್ದೇಶಕ ಸುದೇಶ್ ಕೊಡ್ಡೆ, ಗ್ರಾಮ ಪಮಚಾಯಿತಿ ಅಧ್ಯಕ್ಷ ವಿ. ಮಂಜುನಾಥ, ಪಿಡಿಒ ಶರತಕುಮಾರ ಅಭಿಮಾನ್ ಇದ್ದರು.
ಅರಿವು ಗ್ರಂಥಾಲಯ ಉದ್ಘಾಟನೆ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಅವರು ಗ್ರಾಮದಲ್ಲಿ ಅರಿವು ಗ್ರಂಥಾಲಯ ಹಾಗೂ ಪುಸ್ತಕ ಗೂಡನ್ನು ಉದ್ಘಾಟಿಸಿದರು.
ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು ಇದ್ದರು.