ADVERTISEMENT

ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರದಲ್ಲಿ ಪಾಲ್ಗೊಳ್ಳಿ: ಶಿವರಾಜ ಕಪಲಾಪುರೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2023, 15:50 IST
Last Updated 3 ಫೆಬ್ರುವರಿ 2023, 15:50 IST

ಬೀದರ್: ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘವು
ಬೆಂಗಳೂರಿನ ವಸಂತನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಫೆ. 8 ರಂದು ಹಮ್ಮಿಕೊಂಡಿರುವ ರಾಜ್ಯಮಟ್ಟದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಕಾರ್ಯಾಗಾರ ಹಾಗೂ ಸಂಘದ ಬೆಳ್ಳಿ ಹಬ್ಬ ಕಾರ್ಯಕ್ರಮದಲ್ಲಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ಬಡ್ತಿ ಮುಖ್ಯಶಿಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪುರೆ ಮನವಿ ಮಾಡಿದ್ದಾರೆ.

ಅಂದು ಬೆಳಿಗ್ಗೆ 10.30ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಾಗಾರವನ್ನು ಉದ್ಘಾಟಿಸುವರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಬಿ.ಸಿ. ನಾಗೇಶ ಅಧ್ಯಕ್ಷತೆ ವಹಿಸುವರು. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡುವರು. ಸಂಘದ ರಾಜ್ಯ ಅಧ್ಯಕ್ಷ ಕೆ. ಕೃಷ್ಣಪ್ಪ, ಜನಪ್ರತಿನಿಧಿಗಳು, ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಂಘದ ಪದಾಧಿಕಾರಿಗಳು ಭಾಗವಹಿಸುವರು ಎಂದು ತಿಳಿಸಿದ್ದಾರೆ.

ಕಾರ್ಯಾಗಾರದಲ್ಲಿ ಏಳನೇ ವೇತನ ಆಯೋಗದಲ್ಲಿ ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರಿಗೆ ಪ್ರತ್ಯೇಕ ವೇತನ ಶ್ರೇಣಿ ಕಲ್ಪಿಸಬೇಕು. ಹಿಂದಿನಂತೆ ಸೇವಾ ಹಿರಿತನ ಆಧಾರದಲ್ಲಿ ಶಿಕ್ಷಣ ಸಂಯೋಜಕ ಹುದ್ದೆಗೆ ನೇಮಕ ಮಾಡಬೇಕು. ವರ್ಷಕ್ಕೆ 30 ಗಳಿಕೆ ರಜೆ ನೀಡಬೇಕು. ಬಿಸಿಯೂಟ ಜಂಟಿ ಖಾತೆಯನ್ನು ಹಿಂದಿನಂತೆಯೇ ಮುಂದುವರಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದ್ದಾರೆ.

ADVERTISEMENT

ಕಾರ್ಯಾಗಾರದಲ್ಲಿ ಭಾಗವಹಿಸುವ ಮುಖ್ಯಶಿಕ್ಷಕರಿಗೆ ಒಒಡಿ ಸೌಲಭ್ಯ ದೊರಕಲಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.