ADVERTISEMENT

ಭಗವಂತ ಖೂಬಾಗೆ ನೋಟಿಸ್‌: ಬಿಜೆಪಿ ಮುಖಂಡರ ಆರೋಪ

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 0:25 IST
Last Updated 22 ಫೆಬ್ರುವರಿ 2026, 0:25 IST
ಭಗವಂತ ಖೂಬಾ
ಭಗವಂತ ಖೂಬಾ   

ಬೀದರ್: ‘ಜಿಲ್ಲಾ ಉಸ್ತುವಾರಿ ಸಚಿವರ ಒತ್ತಡಕ್ಕೆ ಮಣಿದು ಪೊಲೀಸ್ ಇಲಾಖೆ ಅಧಿಕಾರ ದುರ್ಬಳಕೆ ಮಾಡಿಕೊಂಡು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಅವರಿಗೆ ನೋಟಿಸ್ ಜಾರಿ ಮಾಡಿದೆ’ ಎಂದು ಬಿಜೆಪಿ ಜಿಲ್ಲಾ ಘಟಕ ಗಂಭೀರ ಆರೋಪ ಮಾಡಿದೆ. ಪೊಲೀಸರ ಕ್ರಮ ಖಂಡನೀಯವಾಗಿದೆ ಎಂದು ಮುಖಂಡರು ಹೇಳಿದ್ದಾರೆ.

ಈ ಕುರಿತು ಬಿಜೆಪಿ ಜಿಲಾಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ರಾಜ್ಯ ಕಾರ್ಯದರ್ಶಿಯಾದ ಬೀದರ್ ದಕ್ಷಿಣ ಶಾಸಕ ಡಾ. ಶೈಲೇಂದ್ರ ಬೆಬ್ಬಾಳೆ, ಔರಾದ್ ಶಾಸಕ ಪ್ರಭು ಚವಾಣ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ಹುಮನಾಬಾದ್ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯ ಎಂ.ಜಿ.ಮುಳೆ ಶನಿವಾರ ಜಂಟಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಅನೇಕ ಗಂಭೀರ ಪ್ರಕರಣಗಳ ಬಗ್ಗೆ ಗಮನಹರಿಸದೆ ಕೈಕಟ್ಟಿಕೊಂಡು ಕುಳಿತಿರುವ ಪೊಲೀಸ್ ಇಲಾಖೆ, ಕಾಂಗ್ರೆಸ್‌ನವರ ಅಣತಿಯಂತೆ ನಡೆದುಕೊಂಡು ವಿರೋಧ ಪಕ್ಷದವರ ಮೇಲೆ ಸವಾರಿ ಮಾಡಲು ಹೊರಟಿರುವುದು ಸರಿಯಲ್ಲ. ಇದರ ವಿರುದ್ಧ ಪಕ್ಷ ಕಾನೂನಿನ ಚೌಕಟ್ಟಿನಲಿ ಸಂಘರ್ಷ ನಡೆಸಲಿದೆ ಎಂದರು.

ADVERTISEMENT

‘ಫೆ. 7ರಂದು ಪಾಪನಾಶ ಮಂದಿರ ಅಭಿವೃದ್ಧಿ ಕಾಮಗಾರಿ ಗುದ್ದಲಿಪೂಜೆ ವಿಷಯದಲ್ಲಿ ಪೊಲೀಸ್ ಇಲಾಖೆ ತಪ್ಪು ಹೆಜ್ಜೆ ಇರಿಸಿದೆ. ನಮಗೆ ಪೂಜೆ, ಅಭಿಷೇಕ ಮಾಡಲು‌ ಬಿಡದೆ ತಡೆದಿದ್ದಲ್ಲದೆ, ಪಕ್ಷದ ಮುಖಂಡರು, ಕಾರ್ಯಕರ್ತರಿಗೆ ಬೆದರಿಸುವುದರ ಜೊತೆಗೆ ನಮ್ಮ ಧಾರ್ಮಿಕ ಭಾವನೆಗೆ ಧಕ್ಕೆ ತರುವ ಕೆಲಸ ಮಾಡಲಾಗಿದೆ’ ಎಂದು ಕಿಡಿಕಾರಿದ್ದಾರೆ.

‘ಭಗವಂತ ಖೂಬಾ ಅವರಿಗೆ ನೋಟಿಸ್ ಜಾರಿ ಹಾಗೂ ಈ ಪ್ರಕರಣ ಸಂಬಂಧ ಪಕ್ಷ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ವಿಷಯದ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ರಾಜ್ಯ ನಾಯಕರೊಂದಿಗೆ ಚರ್ಚಿಸಿ ಅವರ ಗಮನಕ್ಕೆ ತರಲಾಗಿದೆ. ಅವರು ಸಹ ಈ ವಿಷಯದ ಬಗ್ಗೆ ಶೀಘ್ರದಲ್ಲಿ ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುವ ಬಗ್ಗೆ ತಿಳಿಸಿದ್ದಾರೆ. ಏಕಪಕ್ಷೀಯವಾಗಿ ವರ್ತಿಸುತ್ತಿರುವ ಜಿಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಇತರೆ ಅಧಿಕಾರಿಗಳನ್ನು ಕೂಡಲೇ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು. ನಿಯಮದ ಪ್ರಕಾರ ಪೊಲೀಸ್ ಇಲಾಖೆ ಕೆಲಸ ಮಾಡುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.