ಬೀದರ್: ರಾಜಕೀಯ ಪ್ರೇರಿತವಾದ, ದುರುದ್ದೇಶದಿಂದ ಕೂಡಿರುವ ಜಿಲ್ಲೆಯ ಯುವಕರ ಮೇಲಿನ ಗಡೀಪಾರು ಪ್ರಕರಣಗಳನ್ನು ರದ್ದುಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಆಗ್ರಹಿಸಿದೆ.
ಈ ಸಂಬಂಧ ರಾಜ್ಯ ಬಿಜೆಪಿ ಕಾರ್ಯದರ್ಶಿಯೂ ಆದ ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪೀರಪ್ಪ ಔರಾದೆ, ಕಿರಣ್ ಪಾಟೀಲ, ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ವೀರಣ್ಣ ಕಾರಬಾರಿ, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಶಾಸಕ ಪ್ರಕಾಶ್ ಖಂಡ್ರೆ ಅವರು ನಗರದಲ್ಲಿ ಗುರುವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವರ ಆಣತಿಯಂತೆ ಅಧಿಕಾರ ದುರುಪಯೋಗ ಪಡಿಸಿಕೊಂಡು ರಾಜಕೀಯ ಪ್ರೇರಿತವಾಗಿ ಜಿಲ್ಲೆಯ ಯುವಕರನ್ನು ಗಡೀಪಾರು ಮಾಡುತ್ತಿರುವುದು ಖಂಡನಾರ್ಹ. ಭಾಲ್ಕಿ ನಗರದ ಬಿಜೆಪಿ ಎಸ್.ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಹಾಗೂ ದಲಿತ ಸಮಾಜದ ಮುಖಂಡ ಸಂಜೀವಕುಮಾರ ಸಿಂಧೆ ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಮೂಲಕ ಮೊಕದ್ದಮೆ ಹೂಡಿ, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಗೆ ಗಡೀಪಾರು ಮಾಡಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿಫಾರಸು ಮಾಡಿದ್ದಾರೆ. ಅವರಿಗೆ ನೋಟಿಸ್ ಕೂಡ ನೀಡಲಾಗಿದೆ’ ಎಂದು ವಿವರಿಸಿದರು.
‘ಸಂಜೀವಕುಮಾರ ಅವರಿಗೆ ಯಾವುದೇ ಪ್ರಕರಣದಲ್ಲಿ ಸಜೆಯಾಗಿಲ್ಲ. 2022ರಲ್ಲಿ ಪೋಲಿಸ್ ವರಿಷ್ಠಾಧಿಕಾರಿಗಳೇ ಒಳ್ಳೆಯ ನಡತೆ ಪ್ರಮಾಣ ಪತ್ರ ನೀಡಿದ್ದಾರೆ. ಆದರೆ, ಈಗ ಪೊಲೀಸ್ ಇಲಾಖೆಯವರು ಜಿಲ್ಲಾಧಿಕಾರಿಗೆ ತಪ್ಪು ಮಾಹಿತಿ ನೀಡಿದ್ದಾರೆ. ತಪ್ಪು ಮಾಹಿತಿ ಕೊಟ್ಟಿರುವ ಅಧಿಕಾರಿಗಳನ್ನೇ ಗಡೀಪಾರು ಮಾಡಬೇಕು’ ಎಂದು ಆಗ್ರಹಿಸಿದರು.
ಉಸ್ತುವಾರಿ ಸಚಿವರ ಆಣತಿಯಂತೆ ಕೆಲಸ ದಲಿತ ಮುಖಂಡನ ಗಡೀಪಾರಿಗೆ ಖಂಡನೆ ತಪ್ಪೆಸಗಿದ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.