ADVERTISEMENT

ಬೀದರ್: ಪ್ರಾಜಕ್ತಾಗೆ ಶೆಟಕಾರ್ ಪ್ರೌಢಶಾಲೆಯಲ್ಲಿ ಸನ್ಮಾನ

ಎಂ.ಎಸ್ಸಿ ರಸಾಯನ ವಿಜ್ಞಾನದಲ್ಲಿ ನಾಲ್ಕು ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2020, 16:50 IST
Last Updated 23 ನವೆಂಬರ್ 2020, 16:50 IST
ಬೀದರ್‌ನ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಎಂ.ಎಸ್ಸಿ ರಸಾಯನ ವಿಜ್ಞಾನ ವಿಭಾಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ನಾಲ್ಕು ಚಿನ್ನದ ಪದಕ ಗಳಿಸಿರುವ ಪ್ರಾಜಕ್ತಾ ವಿಠ್ಠಲರಾವ್ ಪಾಂಚಾಳ ಅವರನ್ನು ಸೋಮವಾರ ಸನ್ಮಾನಿಸಲಾಯಿತು
ಬೀದರ್‌ನ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಎಂ.ಎಸ್ಸಿ ರಸಾಯನ ವಿಜ್ಞಾನ ವಿಭಾಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ನಾಲ್ಕು ಚಿನ್ನದ ಪದಕ ಗಳಿಸಿರುವ ಪ್ರಾಜಕ್ತಾ ವಿಠ್ಠಲರಾವ್ ಪಾಂಚಾಳ ಅವರನ್ನು ಸೋಮವಾರ ಸನ್ಮಾನಿಸಲಾಯಿತು   

ಬೀದರ್: ಎಂ.ಎಸ್ಸಿ ರಸಾಯನ ವಿಜ್ಞಾನ ವಿಭಾಗದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯದಿಂದ ನಾಲ್ಕು ಚಿನ್ನದ ಪದಕ ಗಳಿಸಿರುವ ಪ್ರಾಜಕ್ತಾ ವಿಠ್ಠಲರಾವ್ ಪಾಂಚಾಳ ಅವರನ್ನು ಇಲ್ಲಿಯ ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಪ್ರೌಢಶಾಲೆಯಲ್ಲಿ ಸೋಮವಾರ ಸನ್ಮಾನಿಸಲಾಯಿತು.

ಶಿವಕುಮಾರೇಶ ಗುರುಕುಲ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಮತ್ತು ಶ್ರೀಮತಿ ಇಂದಿರಾಬಾಯಿ ಗುರುತಪ್ಪ ಶೆಟಕಾರ್ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ ಪೂರೈಸಿರುವ ಪ್ರಾಜಕ್ತಾ ಎಂ.ಎಸ್ಸಿ ರಸಾಯನ ವಿಜ್ಞಾನ ವಿಭಾಗದಲ್ಲಿ ನಾಲ್ಕು ಚಿನ್ನದ ಪದಕ ಪಡೆಯುವ ಮೂಲಕ ಜಿಲ್ಲೆಯ ಕೀರ್ತಿ ಹೆಚ್ಚಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಲಕ್ಷ್ಮಣ ಪೂಜಾರಿ ಹೇಳಿದರು.

ಛಲವಿದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಸಾಧನೆಗೆ ಬಡತನ ಅಡ್ಡಿಯಾಗದು ಎನ್ನುವುದನ್ನು ಪ್ರಾಜಕ್ತಾ ಮತ್ತೊಮ್ಮೆ ನಿರೂಪಿಸಿದ್ದಾರೆ ಎಂದು ತಿಳಿಸಿದರು.

ADVERTISEMENT

ಶೆಟಕಾರ್ ಪ್ರೌಢಶಾಲೆ ಗುಣಮಟ್ಟದ ಶಿಕ್ಷಣಕ್ಕೆ ಹೆಸರಾಗಿದೆ. ಶಾಲೆಯಲ್ಲಿ ವ್ಯಾಸಂಗ ಮಾಡಿದ ನೂರಾರು ವಿದ್ಯಾರ್ಥಿಗಳು ಕೆಎಎಸ್, ವೈದ್ಯ, ಎಂಜಿನಿಯರ್ ಸೇರಿದಂತೆ ವಿವಿಧ ಉನ್ನತ ಹುದ್ದೆಗಳಲ್ಲಿ ಇದ್ದಾರೆ. ವಿದೇಶಗಳಲ್ಲೂ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಹೆಮ್ಮೆಯಿಂದ ನುಡಿದರು.

ಶೈಕ್ಷಣಿಕವಾಗಿ ಬೀದರ್ ಕ್ಷಿಪ್ರಗತಿಯಲ್ಲಿ ಪ್ರಗತಿ ಸಾಧಿಸುತ್ತಿದೆ. ವಿವಿಧ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ಮೆರೆಯುತ್ತಿರುವುದೇ ಇದಕ್ಕೆ ಉದಾಹರಣೆಯಾಗಿದೆ ಎಂದು ಚಂದ್ರಪ್ಪ ಗೌರಶೆಟ್ಟಿ ಪದವಿಪೂರ್ವ ಕಾಲೇಜು ಪ್ರಾಚಾರ್ಯ ರಮೇಶ ಪಾಟೀಲ ಚಟ್ನಳ್ಳಿ ಹೇಳಿದರು.

ಸತತ ಪರಿಶ್ರಮದಿಂದ ವಿದ್ಯಾರ್ಥಿಗಳು ಜೀವನದಲ್ಲಿ ಅಂದುಕೊಂಡ ಗುರಿ ಸಾಧಿಸಲು ಸಾಧ್ಯವಿದೆ ಎಂದು ಸಿದ್ಧಾರೂಢ ಡಿ.ಎಡ್ ಪ್ರಾಚಾರ್ಯ ಮಾಣಿಕರಾವ್ ಪಾಂಚಾಳ ಅಭಿಪ್ರಾಯಪಟ್ಟರು.

ಶಿಕ್ಷಕರಾದ ಶಾಂತಕುಮಾರ ರಗಟೆ, ಕಾಶೀನಾಥ ಸಂಕ, ಗೋಪಾಲ ಕುಲಕರ್ಣಿ, ಶರಣಪ್ಪ ಸಾಗರ್, ಸತ್ಯವಾನ್ ಭೋಸ್ಲೆ, ಧೂಳಪ್ಪ ಸಿದ್ದೇಶ್ವರ, ಸಂತೋಷಿ ಪಾಟೀಲ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.