ಬೀದರ್: 15, 20 ವರ್ಷಗಳಿಂದ ನಡೆಸಲಾಗುತ್ತಿರುವ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘದವರು ನಗರದಲ್ಲಿ ಗುರುವಾರ ಜಿಟಿಜಿಟಿ ಮಳೆಯಲ್ಲೇ ಕೊಡೆಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದರು.
ಅನುದಾನ ರಹಿತ ಖಾಸಗಿ ಶಾಲಾ ಆಡಳಿತ ಮಂಡಳಿಗಳ ಪದಾಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನಗರದ ಸಾಯಿ ಶಾಲೆ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಸಿ, ಆನಂತರ ಪ್ರಮುಖ ಮಾರ್ಗಗಳ ಮೂಲಕ ಜಿಲ್ಲಾಧಿಕಾರಿ ಕಚೇರಿ ವರೆಗೆ ರ್‍ಯಾಲಿ ನಡೆಸಿದರು. ಮಾರ್ಗದುದ್ದಕ್ಕೂ ಘೋಷಣೆಗಳನ್ನು ಕೂಗಿದರು. ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಬರೆದ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಸಲ್ಲಿಸಿದರು.
ರಾಜ್ಯ ಸರ್ಕಾರ ತಕ್ಷಣವೇ ಅನುದಾನ ರಹಿತ ಖಾಸಗಿ ಶಾಲೆಗಳ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೋರಾಟದ ನೇತೃತ್ವ ವಹಿಸಿದ್ದ ಸಂಘದ ಗೌರವ ಅಧ್ಯಕ್ಷ ರೇವಣಸಿದ್ದಪ್ಪ ಜಲಾದೆ ಹೇಳಿದರು.
ಸಂಘದ ಎಂಟು ಪ್ರಮುಖ ಬೇಡಿಕೆಗಳನ್ನು ಈಡೇರಿಸದಿದ್ದರೆ ಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ 42 ತಾಲ್ಲೂಕು ಕೇಂದ್ರಗಳಲ್ಲಿ ಹೋರಾಟ ಮಾಡಲಾಗುವುದು. ಬಡ ಮಕ್ಕಳ ಶಿಕ್ಷಣಕ್ಕೆ ಆಸರೆಯಾಗಿದ್ದ ಆರ್.ಟಿ.ಇ ಮರು ಜಾರಿಗೊಳಿಸಬೇಕು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಸರ್ಕಾರದಿಂದ ಆಂಗ್ಲ ಮಾಧ್ಯಮ ಶಾಲೆ ಆರಂಭಿಸುತ್ತಿರುವುದನ್ನು ಕೈ ಬಿಟ್ಟು ಸರ್ಕಾರಿ ಕನ್ನಡ ಶಾಲೆಗಳನ್ನು ಉಳಿಸಬೇಕು. ಶಾಲಾ ಕಟ್ಟಡದ ಕರದಲ್ಲಿ ರಿಯಾಯಿತಿ ಕಲ್ಪಿಸಬೇಕು. ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆಯಡಿ ಅಗತ್ಯ ಸೌಲಭ್ಯ ಕಲ್ಪಿಸಬೇಕು. ಅನಧಿಕೃತ ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಿಸಬೇಕು ಎಂದು ಆಗ್ರಹಿಸಿದರು.
ತಡೋಳಾದ ರಾಜೇಶ್ವರ ಶಿವಾಚಾರ್ಯ, ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು, ಮುಚಳಂಬದ ಪ್ರಣವಾನಂದ ಸ್ವಾಮೀಜಿ, ಸಂಘದ ಅಧ್ಯಕ್ಷ ರಾಜೇಂದ್ರ ಮಣಗೇರಿ, ಪ್ರಧಾನ ಕಾರ್ಯದರ್ಶಿ ಗುರುನಾಥ ರೆಡ್ಡಿ, ಸಂಘಟನಾ ಕಾರ್ಯದರ್ಶಿ ಮೊಹಮ್ಮದ್ ಸಲಾಹುದ್ದೀನ್ ಫರಾನ್, ಸಂಘದ ಭಾಲ್ಕಿ ತಾಲ್ಲೂಕು ಅಧ್ಯಕ್ಷ ಅಕ್ಷಯ್ ಮುದ್ದಾ, ಬಸವಕಲ್ಯಾಣ ತಾಲ್ಲೂಕು ಅಧ್ಯಕ್ಷ ಧನರಾಜ ದೊಡ್ಡಮನಿ, ಹುಮನಾಬಾದ್ ತಾಲ್ಲೂಕು ಅಧ್ಯಕ್ಷ ಸುರೇಂದ್ರ ಹುಡಗಿಕರ್, ಔರಾದ್ ತಾಲ್ಲೂಕು ಅಧ್ಯಕ್ಷ ಸಂಜೀವಕುಮಾರ ಶೆಟಕಾರ್, ಬೀದರ್ ತಾಲ್ಲೂಕು ಅಧ್ಯಕ್ಷ ಸಂದೀಪ್ ಶೆಟಕಾರ್, ಕಮಲನಗರ ತಾಲ್ಲೂಕು ಅಧ್ಯಕ್ಷ ಸಂಜುಕುಮಾರ ಕಂಠಾಳೆ, ಬೀದರ್ ದಕ್ಷಿಣ ಘಟಕದ ಅಧ್ಯಕ್ಷ ಸೈಯದ್ ಅಹಮ್ಮದ್, ವಿವಿಧ ಶಿಕ್ಷಣ ಸಂಸ್ಥೆಗಳ ಪ್ರಮುಖರಾದ ಗುಂಡಯ್ಯ ತೀರ್ಥ, ಪೂರ್ಣಿಮಾ ಜಿ., ಸುರೇಶ ಚನಶೆಟ್ಟಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.