ADVERTISEMENT

ಕಾರಂಜಾ ಸಂತ್ರಸ್ತರ ಪುನರ್ವಸತಿ ಯೋಜನೆಗೆ ಪ್ರಸ್ತಾವ

ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2021, 13:43 IST
Last Updated 23 ಫೆಬ್ರುವರಿ 2021, 13:43 IST
ಬೀದರ್‌ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು
ಬೀದರ್‌ನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಮಾತನಾಡಿದರು   

ಬೀದರ್: ಕಾರಂಜಾ ಜಲಾಶಯದ ಹಿನ್ನೀರಿನಿಂದಾಗಿ ಸಂಕಷ್ಟ ಎದುರಿಸುತ್ತಿರುವ ಹುಮನಾಬಾದ್ ತಾಲ್ಲೂಕಿನ ಡಾಕುಳಗಿಯ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ದಿಸೆಯಲ್ಲಿ ಯೋಜನೆ ರೂಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಮಂಗಳವಾರ ಇಲ್ಲಿಯ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕರ, ವಿಧಾನ ಪರಿಷತ್‌ ಸದಸ್ಯರ ಸುದೀರ್ಘವಾಗಿ ಚರ್ಚೆಯ ನಂತರ ಸಂತ್ರಸ್ತರ ಪುನರ್ವಸತಿಗಾಗಿ ಸರ್ಕಾರಕ್ಕೆ ಪ್ರಸ್ತಾವ ಕಳಿಸಿಕೊಡಲು ತೀರ್ಮಾನ ಕೈಗೊಳ್ಳಲಾಯಿತು.

‘ಗ್ರಾಮಕ್ಕೆ ನೀರು ನುಗ್ಗಿದಾಗ ಡಾಕುಳಗಿ ಗ್ರಾಮಸ್ಥರು ಪ್ರತಿ ವರ್ಷ ನನ್ನ ಬಳಿ ಅಳಲು ತೋಡಿಕೊಳ್ಳುತ್ತಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗದಿದ್ದರೆ ನಿಮ್ಮ ಬಳಿ ಮತ ಕೇಳಲು ಬರುವುದಿಲ್ಲ ಎಂದು ಹೇಳಿದ್ದೇನೆ. ಮೊದಲು ಸಂತ್ರಸ್ತರಿಗೆ ನೆರವು ಒದಗಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಮುಖ್ಯಮಂತ್ರಿ ಬಳಿ ನಿಯೋಗ ಒಯ್ದು ಮನವರಿಕೆ ಮಾಡಬೇಕು’ ಎಂದು ಹುಮನಾಬಾದ್‌ ಶಾಸಕ ರಾಜಶೇಖರ ಪಾಟೀಲ ಮನವಿ ಮಾಡಿದರು.

ADVERTISEMENT

‘ಯೋಜನೆಯ ಆರಂಭದಲ್ಲಿ ಅಧಿಕಾರಿಗಳು ಸರಿಯಾಗಿ ಸಮೀಕ್ಷೆ ನಡೆಸಿಲ್ಲ. ಹೀಗಾಗಿ ಕಾರಂಜಾ ಜಲಾಶಯ ತುಂಬಿದಾಗೊಮ್ಮೆ ಸಮಸ್ಯೆ ಉಲ್ಬಣಗೊಳ್ಳುತ್ತಿದೆ. ಕೆಲವರಿಗೆ ಪುನರ್ವಸತಿ ಕಲ್ಪಿಸಬೇಕಿದೆ. ಇನ್ನೂ ಕೆಲವರಿಗೆ ಪುನರ್ವಸತಿ ಒದಗಿಸಬೇಕಿದೆ’ ಎಂದು ಹೇಳಿದರು.

‘ಕಾರಂಜಾ ಯೋಜನೆಯ ಅಧಿಕಾರಿಗಳು ಡ್ರೋಣ್‌ ಮೂಲಕ ಸಮೀಕ್ಷೆ ನಡೆಸಿದ್ದು, 90 ಮನೆಗಳಲ್ಲಿ ವಾಸವಾಗಿರುವವರಿಗೆ ಪುನರ್ವತಿ ಕಲ್ಪಿಸಬೇಕಿದೆ. ಐದು ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಸಂತ್ರಸ್ತರಿಗೆ ಮನೆ ಕಟ್ಟಿಕೊಡಲು ಸರ್ಕಾರಕ್ಕೆ ಪ್ರಸ್ತಾವ ಕಳಿಸಲಾಗುವುದು’ ಎಂದು ಸಚಿವ ಪ್ರಭು ಚವಾಣ್‌ ತಿಳಿಸಿದರು.

‘ಯೋಜನೆಯ ಪೂರ್ವದಲ್ಲಿ ನಡೆದ ಸಮೀಕ್ಷೆಯಲ್ಲಿ ಡಾಕುಳಗಿ ಬಿಟ್ಟು ಹೋಗಿದೆ. ನಾಲ್ಕು ವರ್ಷಕ್ಕೊಮ್ಮೆ ಕಾರಂಜಾ ಜಲಾಶಯ ತುಂಬುತ್ತಿರುವ ಕಾರಣ ಮನೆಗಳಿಗೆ ನೀರು ನುಗ್ಗುತ್ತಿದೆ. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಅಗತ್ಯ ಇದೆ’ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.