ADVERTISEMENT

ಸದಾಶಿವ ಆಯೋಗ ವರದಿ ಜಾರಿಗೆ ಆಗ್ರಹ

ಹುಮನಾಬಾದ್: ಮಾದಿಗ ದಂಡೋರ ಸಮಿತಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2022, 2:18 IST
Last Updated 3 ಜುಲೈ 2022, 2:18 IST
ಹುಮನಾಬಾದ್‌ನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು
ಹುಮನಾಬಾದ್‌ನಲ್ಲಿ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದರು   

ಹುಮನಾಬಾದ್: ನ್ಯಾಯಮೂರ್ತಿ ಸದಾಶಿವ ವರದಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮಿತಿಯಿಂದ ಪಟ್ಟಣದ ಪ್ರವಾಸಿ ಮಂದಿರ ಎದುರಿನ ಮುಖ್ಯ ರಸ್ತೆಯಲ್ಲಿ ಶನಿವಾರ ಬೃಹತ್ ಪ್ರತಿಭಟನೆ ಜರುಗಿತು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಸಂಘಟನೆಯ ಪ್ರಮುಖರು ಮಾತನಾಡಿ, ಸಂವಿಧಾನದಲ್ಲಿ ಸರ್ವರಿಗೂ ಸಮಪಾಲು ಸಮಬಾಳು ಎಂಬುವುದಾಗಿದೆ. ಹೀಗಾಗಿ ನಮ್ಮ ಮಾದಿಗ ಸಮಾಜದಿಂದ ಸುಮಾರು 25 ವರ್ಷಗಳಿಂದ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬರುತ್ತಿ ದ್ದರೂ ಸರ್ಕಾರಗಳು ನಿರ್ಲಕ್ಷ ತೋರುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಮಾದಿಗ ಸಮಾಜದ ಜನರಿಗೆ ನ್ಯಾಯ ದೊರಕಿಸಿಕೊಡುವಲ್ಲಿ ನಿರ್ಲಕ್ಷ ವಹಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರ ಮಾದಿಗ ಸಮಾಜದ ಜನರ ಬೇಡಿಕೆಗೆ ಸ್ಪಂದಿಸಿ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.

ADVERTISEMENT

ಸಮಿತಿಯ ರಾಜ್ಯ ಕಾರ್ಯಾಧ್ಯಕ್ಷ ಫರ್ನಾಂಡಿಸ್ ಹಿಪ್ಪಳ್ಗಾವ್, ಜಿಲ್ಲಾಧ್ಯಕ್ಷ ಪ್ರದೀಪ್ ಹೆಗಡೆ, ಜಿಲ್ಲಾ ಉಪಾಧ್ಯಕ್ಷರಾದ ರಾಜಕುಮಾರ್ ಹಳ್ಳಿಖೇಡಕರ್,ಬಂಟಿ ಬರಬಾರೇ, ಪ್ರಧಾನ ಕಾರ್ಯದರ್ಶಿ ಶಿವರಾಜ್ ದೊಡ್ಡಿ,ಯುವ ಘಟಕದ ಜಿಲ್ಲಾ ಅಧ್ಯಕ್ಷ ವಿಜಯಕುಮಾರ್ ಹಿಪ್ಪಳಗಾಂವ, ಹರೀಶ ಗಾಯಕವಾಡ ಸೇರಿದಂತೆ ವಿವಿಧ ತಾಲ್ಲೂಕು ಘಟಕದ ಪದಾಧಿಕಾರಿಗಳು ಇದ್ದರು.

ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ರಾಷ್ಟ್ರೀಯ ಹೆದ್ದಾರಿ 65 ತಡೆಯಲು ಮುಂದಾದ ಸಂದರ್ಭದಲ್ಲಿ ಪ್ರತಿಭಟನಕಾರರನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದೊಯ್ದು ನಂತರ ಬಿಡುಗಡೆಗೊಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣನವರ್ ನೇತೃತ್ವದಲ್ಲಿ ಭಾಲ್ಕಿ ಡಿವೈಎಸ್ಪಿ ಪೃತ್ವಿಕ್ ಶಂಕರ್, ಸಿಪಿಐಗಳಾದ ಶರಣಬಸಪ್ಪ ಕೋಡ್ಲಾ, ಶ್ರೀಕಾಂತ್ ಅಲ್ಲಾಪುರ್, ಈರಣ್ಣ ಹೆಬ್ಬಾಳ್,ಗೋಪಾಲ ನಾಯಕ್, ರವೀಂದ್ರ ಕುಮಾರ್, ಹಾಗೂ ಪಿಎಸ್ಐಗಳಾದ ಮಂಜನಗೌಡ ಪಾಟೀಲ, ನಿಂಗಪ್ಪ ಮಣ್ಣೂರ್, ಮಹೇಂದ್ರಕುಮಾರ್, ಕಿರಣ್, ಸವಿತಾ, ಸಂಚಾರಿ ಪಿಎಸ್ಐಗಳಾದ ಬಸವರಾಜ, ಸುಜಾತಾ, ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಪಟ್ಟಣದ ಸುತ್ತಮುತ್ತಲಿನ ಪ್ರಮುಖ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.