ADVERTISEMENT

ಬೀದರ್: ಕಾಂಗ್ರೆಸ್‌ ಮುಖಂಡರ ಬಂಧನ, ಬಿಡುಗಡೆ

ಗಾಂಧಿ ಕುಟುಂಬಕ್ಕೆ ಕಿರುಕುಳ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 12:54 IST
Last Updated 17 ಜೂನ್ 2022, 12:54 IST
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಬೀದರ್‌ನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಗಾಂಧಿ ಕುಟುಂಬಕ್ಕೆ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಬೀದರ್‌ನ ಡಾ.ಬಿ.ಆರ್‌.ಅಂಬೇಡ್ಕರ್‌ ವೃತ್ತದಲ್ಲಿ ಶುಕ್ರವಾರ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು   

ಬೀದರ್: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಾಂವಿಧಾನಿಕ ಸಂಸ್ಥೆಯಾದ ಇಡಿಯನ್ನು ದುರ್ಬಳಕೆ ಮಾಡಿಕೊಂಡು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕಿರುಕುಳ ಕೊಡುತ್ತಿದೆ ಆರೋಪಿಸಿಜಿಲ್ಲಾ ಕಾಂಗ್ರೆಸ್ ಸಮಿತಿಯು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.

ಪಕ್ಷದ ಜಿಲ್ಲಾ ಉಸ್ತುವಾರಿ ಡಾ. ಶರಣಪ್ರಕಾಶ ಪಾಟೀಲ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರ ನೇತೃತ್ವದಲ್ಲಿ ಡಾ. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಿದ್ದರು. ಆದರೆ, ಪೊಲೀಸರು ಅನುಮತಿ ನೀಡಲಿಲ್ಲ.

ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾನರ್‌ ಹಾಗೂ ಪೋಸ್ಟರ್‌ಗಳನ್ನು ಹಿಡಿದುಕೊಂಡು ಜಿಲ್ಲಾಧಿಕಾರಿ ಕಚೇರಿಯತ್ತ ಹೊರಡಲು ಸಿದ್ಧರಾದರು. ಪೊಲೀಸರು ಅವರನ್ನು ತಡೆದಾಗ ಕೆಲ ಮುಖಂಡರು ಹಾಗೂ ಪೊಲೀಸ್‌ ಅಧಿಕಾರಿಗಳ ಮಧ್ಯೆ ಮಾತಿನ ಚಕಮಕಿ ನಡೆಯಿತು.

ADVERTISEMENT

ನಂತರ ಪೊಲೀಸರು ಅನಿವಾರ್ಯವಾಗಿ ಮಾಜಿ ಸಚಿವ ಡಾ. ಶರಣಪ್ರಕಾಶ ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ, ಭೀಮರಾವ್‌ ಪಾಟೀಲ, ಮಾಜಿ ಸಂಸದ ನರಸಿಂಹರಾವ್ ಸೂರ್ಯವಂಶಿ, ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಕೆ.ಪುಂಡಲೀಕರಾವ್, ವಿಜಯಸಿಂಗ್, ಪಕ್ಷದ ಮಹಿಳಾ ಘಟಕದ ಅಧ್ಯಕ್ಷ ಮೀನಾಕ್ಷಿ ಸಂಗ್ರಾಮ, ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣುಕುಮಾರ ಮೋದಿ, ಗೀತಾ ಚಿದ್ರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ, ಎಂ.ಎ.ಸಮಿ, ಬಸವರಾಜ ಬುಳ್ಳಾ, ಅಮೃತರಾವ್‌ ಚಿಮಕೋಡೆ, ಶಂಕರ ದೊಡ್ಡಿ, ಆನಂದ ದೇವಪ್ಪ, ಸಚಿನ ಮಲ್ಕಾಪುರೆ, ಸಂಜೀವಕುಮಾರ ಡಿ.ಕೆ, ಶಂಕರ ರೆಡ್ಡಿ, ರೋಹಿದಾಸ ಮೋರೆ, ಸಂಜಯ ಜಾಗೀರಾದ್, ಶಿವರಾಜ ಹಾಸನಕರ್‌ ಸೇರಿದಂತೆ ಪ್ರಮುಖರನ್ನು ಬಂಧಿಸಿ ಪೊಲೀಸ್‌ ಮುಖ್ಯಾಲಯಕ್ಕೆ ಒಯ್ದು ಮಧ್ಯಾಹ್ನ ಬಿಡುಗಡೆ ಮಾಡಿದರು.

ಪ್ರತಿಭಟನೆಯಲ್ಲಿ ಪಕ್ಷದ ಮುಖಂಡರು, ಜಿಲ್ಲಾ ಕಾಂಗ್ರೆಸ್ ಸಮಿತಿ, ಮುಂಚೂಣಿ ಘಟಕಗಳು, ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಪೊಲೀಸರು ಪ್ರತಿಭಟನಾಕಾರರಿಗೆ ಅವಕಾಶ ನೀಡದ ಕಾರಣ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾ ಪೊಲೀಸ್‌ ಮುಖ್ಯಾಲಯದಲ್ಲೇ ಬೀದರ್ ಉಪ ವಿಭಾಗಾಧಿಕಾರಿ ನಯಿಮ್‌ ಮೋಮಿನ್‌ ಅವರಿಗೆ ರಾಷ್ಟ್ರಪತಿಗೆ ಬರೆದ ಮನವಿಪತ್ರ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.