ADVERTISEMENT

ಬೀದರ್: ಅಂಗನವಾಡಿ ಬಾಡಿಗೆ ಹಣಕ್ಕೆ ಒತ್ತಾಯಿಸಿ ಪ್ರತಿಭಟನೆ

ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 14:28 IST
Last Updated 26 ನವೆಂಬರ್ 2020, 14:28 IST
ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ಬೀದರ್‍ನಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ನೌಕರರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು
ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಬಿಡುಗಡೆ ಮಾಡಲು ಒತ್ತಾಯಿಸಿ ಬೀದರ್‍ನಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಅಂಗನವಾಡಿ ನೌಕರರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು   

ಬೀದರ್: ಅಂಗನವಾಡಿ ಕೇಂದ್ರಗಳ ಬಾಡಿಗೆ ಹಣ ಪಾವತಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಂಗನವಾಡಿ ನೌಕರರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ನೇತೃತ್ವದಲ್ಲಿ ನಗರದ ಬ್ಯಾಂಕ್ ಕಾಲೊನಿ ಕ್ರಾಸ್‍ನಲ್ಲಿ ಇರುವ ಬಸವೇಶ್ವರ ವೃತ್ತದಿಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಶಿಶು ಯೋಜನಾ ಅಭಿವೃದ್ಧಿ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿದರು.

ಅಂಗನವಾಡಿ ಕೇಂದ್ರಗಳ ಒಂಬತ್ತು ತಿಂಗಳ ಬಾಕಿ ಬಾಡಿಗೆ ಹಣ ಬಿಡುಗಡೆ ಮಾಡಬೇಕು. ಪ್ರತಿ ತಿಂಗಳು ಸರಿಯಾದ ಸಮಯಕ್ಕೆ ಬಾಡಿಗೆ ಹಣ ಪಾವತಿಗೆ ಕ್ರಮ ಕೈಗೊಳ್ಳಬೇಕು. ಮಾತೃ ವಂದನ ಪ್ರೋತ್ಸಾಹ ಧನ, ಭಾಗ್ಯಲಕ್ಷ್ಮಿ ಪ್ರೋತ್ಸಾಹ ಧನ, ನಿವೃತ್ತಿ ಹೊಂದಿದವರ ಎನ್‍ಪಿಎಸ್ ಹಣ ಸಂದಾಯ ಮಾಡಬೇಕು. ಮರಣ ಹೊಂದಿದವರಿಗೆ ಪರಿಹಾರ ಹಾಗೂ ಅವರ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ನೌಕರಿ ಒದಗಿಸಬೇಕು. 10ನೇ ಪಾಸಾದ ಸಹಾಯಕಿಯರಿಗೆ ಕಾರ್ಯಕರ್ತೆ ಹುದ್ದೆಗೆ ಬಡ್ತಿ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಬೀದರ್ ತಾಲ್ಲೂಕು ಘಟಕದ ಅಧ್ಯಕ್ಷೆ ಶಕುಂತಲಾ ಸೋನಿ, ಕಾರ್ಯಾಧ್ಯಕ್ಷೆ ಸುಜಾತಾ, ಶಾಂತಮ್ಮ, ಸರಸ್ವತಿ, ಮಾರ್ಥಾ, ಚನ್ನಮ್ಮ, ಶ್ರೀದೇವಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.