ADVERTISEMENT

ಹೆಚ್ಚು ವಿದ್ಯಾರ್ಥಿಗಳಿಗೆ ಐಟಿಐ ತರಬೇತಿ ಕೊಡಿ: ಸಚಿವ ಡಾ.ಶರಣಪ್ರಕಾಶ ಪಾಟೀಲ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2023, 16:05 IST
Last Updated 28 ಅಕ್ಟೋಬರ್ 2023, 16:05 IST
ಡಾ.ಶರಣಪ್ರಕಾಶ ಪಾಟೀಲ 
ಡಾ.ಶರಣಪ್ರಕಾಶ ಪಾಟೀಲ     

ಬೀದರ್‌: ‘ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಐಟಿಐ ವಿದ್ಯಾರ್ಥಿಗಳ ಪ್ರವೇಶಾತಿ ಸಂಖ್ಯೆ ಬಹಳ ಕಡಿಮೆ ಇದೆ. ಇದರ ಬಗ್ಗೆ ಹೆಚ್ಚು ಪ್ರಚಾರ ಕೈಗೊಂಡು ಹೆಚ್ಚಿನವರಿಗೆ ತರಬೇತಿ ಕೊಡಬೇಕು’ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕೌಶಲ್ಯಾಭಿವೃದ್ದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಹೈಸ್ಕೂಲ್ ಮತ್ತು ಪಿ.ಯು.ಸಿ ಕಾಲೇಜುಗಳಲ್ಲಿ ಈ ಕೋರ್ಸಿನ ಕುರಿತು ಹೆಚ್ಚು ಪ್ರಚಾರ ಕೈಗೊಳ್ಳಬೇಕು’ ಎಂದು ಪ್ರಾಂಶುಪಾಲರಿಗೆ ಸೂಚಿಸಿದರು.

ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ದಿ ತರಬೇತಿ ನೀಡುವುದರೊಂದಿಗೆ ಅವರಿಗೆ ಉದ್ಯೋಗ ಸಿಗುವಂತಾಗಲು ಕ್ಯಾಂಪಸ್ ಸಂದರ್ಶನ ಮತ್ತು ಉದ್ಯೋಗ ಮೇಳ ಆಯೋಜಿಸಬೇಕು. ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆ ಕುರಿತು ಎಲ್ಲಾ ಗ್ರಾಮ ಪಂಚಾಯಿತಿ ಹಂತಗಳಲ್ಲಿ ಪ್ರಚಾರ ಕೈಗೊಳ್ಳಬೇಕು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ಪಿ.ಡಿ.ಒ.ಗಳಿಗೆ ಈ ಕುರಿತು ಒಂದೇ ಗುರಿ ನಿಗದಿಪಡಿಸಬೇಕು ಎಂದು ಹೇಳಿದರು.

ADVERTISEMENT

ಜಿಲ್ಲೆಯಲ್ಲಿ ಶೇ 50ರಿಂದ 60ರಷ್ಟು ಹುದ್ದೆಗಳು ಐ.ಟಿ.ಐ ಕಾಲೇಜುಗಳಲ್ಲಿ ಖಾಲಿ ಇವೆ. ಹೆಚ್ಚಿನ ಐ.ಟಿ.ಐ. ಗಳಿಗೆ ಕಾಂಪೌಂಡ್‌ ಇಲ್ಲ. ಕೆಕೆಆರ್‌ಡಿಬಿ ಅನುದಾನದಲ್ಲಿ ನಿರ್ಮಿಸಬೇಕು ಎಂದು ಪ್ರಾಂಶುಪಾಲರು ಸಚಿವರಿಗೆ ಮನವಿ ಮಾಡಿದರು.

ವಿಧಾನ ಪರಿಷತ್‌ ಸದಸ್ಯ ಡಾ.ಚಂದ್ರಶೇಖರ ಬಿ.ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ ಬಿರಾದಾರ, ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಲೋಕೇಶ, ಜಿಲ್ಲಾ ಉದ್ಯೋಗ ಅಧಿಕಾರಿ ಬಸವರಾಜ, ಐ.ಟಿ.ಐ ಕಾಲೇಜುಗಳ ಪ್ರಾಂಶುಪಾಲರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.