ಬೀದರ್: ‘ಮಾರ್ಚ್ 1ರಿಂದ 23ರ ವರೆಗೆ ಜಿಲ್ಲೆಯ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥಿತ ಪರೀಕ್ಷೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ನಿರ್ದೇಶನ ನೀಡಿದರು.
ಜಿಲ್ಲೆಯ ಒಟ್ಟು 190 ಕಾಲೇಜುಗಳ 21,551 ವಿದ್ಯಾರ್ಥಿಗಳು 33 ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವರು. ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ ಯಾವುದೇ ತರಹದ ನಕಲು ನಡೆಯದಂತೆ ನೋಡಿಕೊಳ್ಳಬೇಕು. ಪರೀಕ್ಷೆಯ ದಿನ ಕೇಂದ್ರಗಳ ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳು, ಸೈಬರ್ ಕೇಂದ್ರಗಳನ್ನು ಮುಚ್ಚಿಡಬೇಕು. 200 ಮೀಟರ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ, ಕಾಲೇಜುಗಳಲ್ಲಿ ಮತ್ತು ಇತರೆ ಶೈಕ್ಷಣಿಕ ಸಂಸ್ಥೆಗಳಲ್ಲಿ ಈ ಪರೀಕ್ಷೆ ಹೊರತುಪಡಿಸಿ ಇತರೆ ಶೈಕ್ಷಣಿಕ ಚಟುವಟಿಕೆಗಳಿಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಅಭ್ಯರ್ಥಿಗಳು ಪರೀಕ್ಷಾ ಕಾರ್ಯನಿರತ ಅಧಿಕಾರಿಗಳು, ಸಿಬ್ಬಂದಿ, ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಬಳಸುವುದನ್ನು ನಿರ್ಬಂಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರದ ಅಧಿಕಾರಿ, ಸಿಬ್ಬಂದಿ ಅಧಿಕೃತ ಗುರುತಿನ ದಾಖಲೆಗಳೊಂದಿಗೆ ಹಾಜರಿರಬೇಕು. ಈಗಾಗಲೇ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು, ಪೊಲೀಸ್ ಅಧಿಕಾರಿಗಳ ತಂಡ ರಚಿಸಲಾಗಿದೆ. ಸೂಕ್ತ ಸಮಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಪಡೆದು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಬೇಕೆಂದು ನಿರ್ದೇಶನ ನೀಡಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್, ಆಯಾ ತಾಲ್ಲೂಕಿನ ತಹಶೀಲ್ದಾರ್, ಕಾಲೇಜು ಪ್ರಾಂಶುಪಾಲರು, ಪೊಲೀಸ್ ಅಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.