ADVERTISEMENT

ಗೃಹ ಉತ್ಪನ್ನಗಳಿಗೆ ಮಾರುಕಟ್ಟೆ ವ್ಯವಸ್ಥೆ

ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2020, 10:48 IST
Last Updated 19 ಜನವರಿ 2020, 10:48 IST
ಬೀದರ್‌ನ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಹಾಗೂ ಬಿ.ಆರ್.ಮಮತಾ ಇದ್ದರು
ಬೀದರ್‌ನ ಜಿಲ್ಲಾ ಪಂಚಾಯಿತಿ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಲ್ಲಿ ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ಹಾಗೂ ಬಿ.ಆರ್.ಮಮತಾ ಇದ್ದರು   

ಬೀದರ್: ‘ಕೌಶಲ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಗೃಹ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸುವ ದಿಸೆಯಲ್ಲಿ ಚಿಂತನೆ ನಡೆದಿದೆ’ ಎಂದು ಕರ್ನಾಟಕ ಕೌಶಲ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷೆ ರತ್ನಪ್ರಭಾ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು.

‘ಕೈಗಾರಿಕಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಕೌಶಲ ವೃದ್ಧಿಗೆ ಪ್ರಾಧಿಕಾರ ನೆರವಾಗುತ್ತಿದೆ. ಪ್ರಾಧಿಕಾರವು ನಿರುದ್ಯೋಗಿ ಯುವಕ ಯುವತಿಯರಿಗೆ ತರಬೇತಿಯನ್ನು ನೀಡುತ್ತಿದೆ’ ಎಂದು ತಿಳಿಸಿದರು.
‘ಪ್ರಾಧಿಕಾರದಿಂದ ಪ್ರತಿ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಸಭೆಗಳ ಮೂಲಕ 500 ಜನರನ್ನು ಆಯ್ಕೆ ಮಾಡಿಕೊಂಡು ಅವರಿಗೆ ವೃತ್ತಿ ಕೌಶಲ ತರಬೇತಿ ನೀಡುವ ಯೋಜನೆ ಇದೆ’ ಎಂದು ತಿಳಿಸಿದರು.

ADVERTISEMENT

ಸಂಜೀವಿನಿ ಅಭಿಯಾನದ ನಿರ್ದೇಶಕಿ ಬಿ.ಆರ್.ಮಮತಾ ಮಾತನಾಡಿ, ‘ಜೀವನೋಪಾಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಬಡತನ ರೇಖೆಗಿಂತ ಕೆಳಗಿರುವ, ವಿಕಲಚೇತನರು, ಅಲ್ಪಸಂಖ್ಯಾತರ ಅಭ್ಯರ್ಥಿಗಳನ್ನು ಗುರುತಿಸಿ 5 ರಿಂದ 10 ಜನರ ಗುಂಪು ಮಾಡಿ ತರಬೇತಿಯನ್ನು ನೀಡಲಾಗುವುದು’ ಎಂದು ಹೇಳಿದರು.

ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಮಾತನಾಡಿ, ‘ಜಿಲ್ಲೆಯಲ್ಲಿ ಈಗಾಗಲೇ 30 ಸಾವಿರ ಅಭ್ಯರ್ಥಿಗಳು ಉದ್ಯೋಗ ಕೌಶಲ ತರಬೇತಿಗೆ ನೋಂದಣಿ ಮಾಡಿಸಿದ್ದಾರೆ. ಜಿಲ್ಲೆಯಲ್ಲಿ ನಿರುದ್ಯೋಗ ಸಮಸ್ಯೆ ಇದ್ದು, ಕೌಶಲ ತರಬೇತಿ ನೀಡುವ ಮೂಲಕ ಮಾನವ ಸಂಪನ್ಮೂಲ ಅಭಿವೃದ್ಧಿಗೆ ಕ್ರಮ ವಹಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸೂರ್ಯಕಾಂತ.ಎಸ್, ತಾಲ್ಲೂಕು ಪಂಚಾಯಿತಿ, ನಗರಸಭೆ, ಗ್ರಾಮ ಪಂಚಾಯಿತಿ ಅಧಿಕಾರಿ, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.