ADVERTISEMENT

ಖಾಸಗಿ ಶಾಲೆಗಳ ಮಾನ್ಯತೆ ರದ್ದುಪಡಿಸಲು ಆಗ್ರಹ

ಶುಲ್ಕ ಕಟ್ಟಿಸಿಕೊಳ್ಳಲು ಬಡ್ಡಿ ವ್ಯವಹಾರದ ಆರೋಪ

​ಪ್ರಜಾವಾಣಿ ವಾರ್ತೆ
Published 15 ಜೂನ್ 2021, 14:09 IST
Last Updated 15 ಜೂನ್ 2021, 14:09 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಎಸ್ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಮನವಿಪತ್ರ ಸಲ್ಲಿಸಿದರು
ಬೀದರ್‌ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಎಸ್ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಮನವಿಪತ್ರ ಸಲ್ಲಿಸಿದರು   

ಬೀದರ್: ಶುಲ್ಕ ಕಟ್ಟಿಸಿಕೊಳ್ಳಲು ಬಡ್ಡಿ ವ್ಯವಹಾರ ಮಾಡುವ ಖಾಸಗಿ ಶಾಲೆಗಳ ಮಾನ್ಯತೆ ರದ್ದು ಮಾಡಬೇಕು ಎಂದು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಜಿಲ್ಲಾ ಘಟಕ ಆಗ್ರಹಿಸಿದೆ.

ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗದಿದ್ದರೂ ಮಹಾನಗರಗಳಲ್ಲಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಹಗಲು ದರೋಡೆ ನಡೆಸಿವೆ. ಶುಲ್ಕಕ್ಕಾಗಿ ಪಾಲಕರನ್ನು ಹಿಂಸಿಸುವ ಹಾಗೂ ಬಡ್ಡಿಗಾಗಿ ಹಣ ಕೊಡಿಸಲು ಮುಂದಾದ ಶಿಕ್ಷಣ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದೆ.

ಕೋವಿಡ್‌ನಿಂದ ಅನೇಕ ಮಕ್ಕಳು ಪಾಲಕರನ್ನು ಕಳೆದುಕೊಂಡಿದ್ದಾರೆ. ಲಾಕ್‌ಡೌನ್‌ನಿಂದ ಅನೇಕ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಪಾಲಕರು ಆರ್ಥಿಕ ಸಂಕಷ್ಟದಲ್ಲಿರುವಾಗ ದುಬಾರಿ ಶುಲ್ಕ ವಸೂಲಿ ಮಾಡಲು ಮುಂದಾಗಿರುವುದು ಖಂಡನೀಯ ಎಂದು ಹೇಳಿದೆ.

ADVERTISEMENT

ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿರುವ ಖಾಸಗಿ ಶಾಲೆಗಳ ಶುಲ್ಕ ನಿಯಂತ್ರಣ ಡೇರಾ ಸಮಿತಿ ಸಭೆ ಸೇರಿ 1983ರ ಶಿಕ್ಷಣ ಕಾಯ್ದೆ ಪ್ರಕಾರ ಪ್ರತಿಯೊಂದು ಖಾಸಗಿ ಶಾಲೆಗಳು ಅನುಸರಿಸಬೇಕಾದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಆದೇಶ ಮಾಡಬೇಕು ಎಂದು ಒತ್ತಾಯಿಸಿದೆ.

ಪೋಷಕರ ಸಭೆ ಕರೆದು ಹೆಚ್ಚುವರಿ ಶುಲ್ಕ ಕೇಳಿದರೆ ದೂರು ಸಲ್ಲಿಸಲು ಜಿಲ್ಲಾಧಿಕಾರಿ ಅವಕಾಶ ಮಾಡಿಕೊಡಬೇಕು. 1983 ರ ಶಿಕ್ಷಣ ಕಾಯ್ದೆ ಮತ್ತು ಆರ್.ಟಿ.ಇ. 2009ರ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶಕುಮಾರ ಅವರಿಗೆ ಬರೆದ ಮನವಿಪತ್ರವನ್ನು ಎಸ್ಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೊಡಗೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗೆ ಸಲ್ಲಿಸಿದರು.

ಅವಿನಾಶ ಪಾಟೀಲ, ಅಮರ್ ಗಾದಗಿ, ಅರುಣ ಕೊಡಗೆ, ಆಕಾಶ ಕೊಡಗೆ, ರೋಷನ್ ಮಲ್ಕಾಪೂರೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.