ADVERTISEMENT

ಬೀದರ್ | ವೈದ್ಯಕೀಯ ಪರೀಕ್ಷೆ ಮುಂದೂಡಲು ಆಗ್ರಹ

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2022, 16:36 IST
Last Updated 3 ಫೆಬ್ರುವರಿ 2022, 16:36 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟುಡೆಂಟ್ಸ್ ಆರ್ಗನೈಸೆಷನ್‌ ಮೆಡಿಕಲ್‌ ಸ್ಟುಡೆಂಟ್ಸ್ ಸ್ಟ್ರಗಲ್‌ ಕಮಿಟಿ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟುಡೆಂಟ್ಸ್ ಆರ್ಗನೈಸೆಷನ್‌ ಮೆಡಿಕಲ್‌ ಸ್ಟುಡೆಂಟ್ಸ್ ಸ್ಟ್ರಗಲ್‌ ಕಮಿಟಿ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್: ವೈದ್ಯಕೀಯ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟುಡೆಂಟ್ಸ್ ಆರ್ಗನೈಸೆಷನ್‌ ಮೆಡಿಕಲ್‌ ಸ್ಟುಡೆಂಟ್ಸ್ ಸ್ಟ್ರಗಲ್‌ ಕಮಿಟಿ ಜಿಲ್ಲಾ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಒಂದು ವರ್ಷ ಪಠ್ಯಕ್ರಮಗಳು ನಡೆಯಬೇಕಿತ್ತು. ಆದರೆ, ಕೋವಿಡ್ ಕಾರಣ ಕೇವಲ ಏಳು ತಿಂಗಳು ಮಾತ್ರ ತರಗತಿಗಳು ನಡೆದಿವೆ. ಪಠ್ಯಕ್ರಮ ಪೂರ್ಣಗೊಂಡಿಲ್ಲ. ವಿದ್ಯಾರ್ಥಿಗಳು ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲಿ ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಿದ್ದಾರೆ. ಕಲಿಕೆಗೆ ಹೆಚ್ಚು ಸಮಯ ಕೊಡಲು ಸಾಧ್ಯವಾಗಿಲ್ಲ ಎಂದು ಹೇಳಿದರು.

ಓಮೈಕ್ರಾನ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಒಂದು ವಾರದ ಹಿಂದೆ ಎಐಡಿಎಸ್ಓ ಮತ್ತು ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಆನ್‌ಲೈನ್‌ ಮೂಲಕ ಹೋರಾಟ ನಡೆಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಯನ್ನು ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ ಎಂದು ತಿಳಿಸಿದರು.

ADVERTISEMENT

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಹಾಗೂ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಉಪ ಕುಲಪತಿಯನ್ನು ಭೇಟಿ ಮಾಡಿ ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳ ಪರವಾಗಿ ನಿರ್ಧಾರ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ. ಇದಕ್ಕೆ ಆರೋಗ್ಯ ಸಚಿವರೂ ಸಹಮತ ವ್ಯಕ್ತಪಡಿಸಿದ್ದಾರೆ. ಮೊದಲು ಸಕಾರಾತ್ಮಕವಾಗಿ ಸ್ಪಂದಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು ಇದೀಗ ಧಿಡೀರ್‌ ಫೆಬ್ರುವರಿ 22 ರಿಂದ ಪರೀಕ್ಷಾ ವೇಳಾಪಟ್ಟಿ ಪ್ರಕಟಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಂತಿಮ ವರ್ಷದ ಸಾವಿರಾರು ವೈದ್ಯಕೀಯ ವಿದ್ಯಾರ್ಥಿಗಳು ಸಂದಿಗ್ಧ ಪರಿಸ್ಥಿತಿಗೆ ಸಿಲುಕಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ಪರೀಕ್ಷೆ ಮುಂದೂಡಬೇಕು ಎಂದು ಕುಲಪತಿ ಅವರನ್ನು ಒತ್ತಾಯಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಅವರಿಗೆ ಎಐಡಿಎಸ್‍ಓ ಜಿಲ್ಲಾ ಸಂಚಾಲಕ ಹಣಮಂತ ಎಸ್.ಎಚ್ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿಯ ಸದಸ್ಯರಾದ ನಿಖಿಲ್ ವಿ ಗೊರಿಯಾ, ಐತೆಸಾಮ್ ಫಾರೂಕ್, ವಿಕಾರ್ ಯುನಿಸ್, ಕುಮಾಯಿಲ್ ಖಾಸಿಫ್, ಸಿದ್ದಣ್ಣ ಗುಣಿಕಿ, ಗುರುಪ್ರಸಾದ ಮೊರ್ಗೆ, ಕರ್ಮವೀರ, ಶಿವು ಬಿರಾದಾರ, ಕೃಷ್ಣ ಪಾಟೀಲ, ಕಿರ್ತನ್ ಎಂ, ಪ್ರಕಾಶ್, ಪವನ, ದಿನೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.