ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದ ಆರೋಪಿಗಳಾದ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ, ಕಲಬುರಗಿಯ ಮಾಜಿ ಕಾರ್ಪೊರೇಟರ್ ರಾಜು ಕಪನೂರ ಸೇರಿದಂತೆ ಐವರಿಗೆ ನಗರದ ಜೆಎಂಎಫ್‌ಸಿ ನ್ಯಾಯಾಲಯವು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಶನಿವಾರ ಆದೇಶ ಹೊರಡಿಸಿದೆ.
ಸಿಐಡಿ ಅಧಿಕಾರಿಗಳು ರಾಜು ಕಪನೂರ, ಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಗೋರಖನಾಥ ಸಜ್ಜನ್, ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ನಂದಕುಮಾರ ನಾಗಭುಜಂಗೆ, ಕಲಬುರಗಿಯ ಪ್ರಥಮ ದರ್ಜೆ ಗುತ್ತಿಗೆದಾರ ರಾಮನಗೌಡ ಪಾಟೀಲ ಹಾಗೂ ಸತೀಶ ರತ್ನಾಕರ ದುಬಲಗುಂಡಿ ಅವರನ್ನು ಜನವರಿ 10ರಂದು ಬಂಧಿಸಿದ್ದರು. ಬಳಿಕ ನ್ಯಾಯಾಲಯವು ಐದು ದಿನಗಳ ವರೆಗೆ ಸಿಐಡಿ ಕಸ್ಟಡಿಗೆ ಒಪ್ಪಿಸಿತ್ತು. ಜನವರಿ 15ರಂದು ನ್ಯಾಯಾಲಯವು ಪುನಃ ಮೂರು ದಿನಗಳ ವರೆಗೆ ಸಿಐಡಿ ಕಸ್ಟಡಿ ಅವಧಿ ವಿಸ್ತರಿಸಿತ್ತು. ಸಿಐಡಿ ಕಸ್ಟಡಿ ಅವಧಿ ಕೊನೆಗೊಂಡಿದ್ದರಿಂದ ಶನಿವಾರ ನ್ಯಾಯಾಲಯದ ಎದುರು ಐದೂ ಜನ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು.
ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ರಾಮಮೂರ್ತಿ ಅವರು ಸಿಐಡಿ ಹಾಗೂ ಆರೋಪಿಗಳ ಪರ ವಕೀಲರ ವಾದ–ವಿವಾದ ಆಲಿಸಿದ ನಂತರ ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದರು.
ಕೊಲೆ ಬೆದರಿಕೆ ಇದೆ ಎಂದು ಆರೋಪಿಸಿ ಡೆತ್‌ನೋಟ್ ಬರೆದಿಟ್ಟು ಸಚಿನ್ ಪಾಂಚಾಳ್ ಡಿಸೆಂಬರ್ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಒಂಬತ್ತು ಜನರ ವಿರುದ್ಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.