ಔರಾದ್: ‘ಜಿಲ್ಲೆಯ ಗಡಿ ಭಾಗದ ಖಾಸಗಿ ಕನ್ನಡ ಶಾಲೆಗಳನ್ನು ಉಳಿಸಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮುಂದಾಗಬೇಕು’ ಎಂದು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಮನವಿ ಮಾಡಿದೆ.
ತಾಲ್ಲೂಕಿಗೆ ಶನಿವಾರ ಭೇಟಿ ನೀಡಿದ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅವರಿಗೆ ಮನವಿ ಸಲ್ಲಿಸಿದ ಶಾಲಾ ಅಡಳಿತ ಮಂಡಳಿ ಪದಾಧಿಕಾರಿಗಳು,‘ಗಡಿಯಲ್ಲಿರುವ ಖಾಸಗಿ ಅನುದಾನ ರಹಿತ ಕನ್ನಡ ಶಾಲೆಗಳು ಅಳಿವಿನ ಅಂಚಿನಲ್ಲಿವೆ.
ಗಡಿಯಲ್ಲೂ ಶ್ರೀಮಂತರು, ಉದ್ಯಮಿಗಳು ದೊಡ್ಡ ದೊಡ್ಡ ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ತೆರೆಯುತ್ತಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ನಾವು ಕನ್ನಡ ಶಾಲೆ ಉಳಿಸಿಕೊಂಡು ಹೋಗುವುದು ತುಂಬಾ ಕಷ್ಟವಾಗಿದೆ’ ಎಂದು ತಿಳಿಸಿದ್ದಾರೆ.
‘ಪರಿಸ್ಥಿತಿ ಹೀಗೆ ಮುಂದುವರಿದರೆ ಕೆಲವೇ ವರ್ಷಗಳಲ್ಲಿ ಇಲ್ಲಿ ಒಂದೂ ಕನ್ನಡ ಶಾಲೆ ಉಳಿಯುವುದಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದರು.
‘ಗಡಿ ಭಾಗದ ಕನ್ನಡ ಶಾಲೆಗಳಿಗೆ ಅನುದಾನ ಕೊಡಬೇಕು. ಕನ್ನಡ ಶಾಲೆ ಪರವಾನಗಿ ನವೀಕರಣ ನಿಯಮ ಸರಳೀಕರಣ ಮಾಡಬೇಕು. ಗಡಿ ಭಾಗದ ಸರ್ಕಾರಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರ ನೇಮಕ ಮಾಡಬೇಕು. 1ರಿಂದ ಪಿಯುಸಿವರೆಗೆ ಕನ್ನಡ ಮಾಧ್ಯಮ ಶಾಲೆ ಮಕ್ಕಳಿಗೆ ವಸತಿ ನಿಲಯದ ಸೌಲಭ್ಯ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.
‘ಕನ್ನಡ ಭಾಷೆ ಉಳಿಸಿ–ಬೆಳೆಸಲು ತಮ್ಮ ಬೇಡಿಕೆಗಳು ಪೂರಕವಾಗಿವೆ. ಈ ನಿಟ್ಟಿನಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗುವುದು’ ಎಂದು ಪ್ರಾಧಿಕಾರದ ಅಧ್ಯಕ್ಷರು ಭರವಸೆ ನೀಡಿದರು.
ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುರುನಾಥರೆಡ್ಡಿ, ತಾಲ್ಲೂಕು ಅಧ್ಯಕ್ಷ ಸಂಜೀವ ಶೆಟಕಾರ, ಸಂಜೀವ ಕಂಟಾಳೆ, ಗುರುನಾಥ ದೇಶಮುಖ, ರಾಜಕುಮಾರ ಹಮಿಲಾಪುರೆ ಹಾಗೂ ಮತ್ತಿತರರು ಇದ್ದರು.
ಕನ್ನಡ ಶಾಲೆ ರಕ್ಷಣೆಗೆ ಆಗ್ರಹಿಸಿ ಧರಣಿ
ಇಂದು ಗಡಿ ಭಾಗದ ಕನ್ನಡ ಶಾಲೆಗಳ ರಕ್ಷಣೆಗೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಯ ನೇತೃತ್ವದಲ್ಲಿ ಸೋಮವಾರ ಇಲ್ಲಿಯ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಲಾಗುವುದು ಎಂದು ಬಸವರಾಜ ಶೆಟಕಾರ ತಿಳಿಸಿದ್ದಾರೆ. ಸೋಮವಾರ ಬೆಳಿಗ್ಗೆ ಪಟ್ಟಣದ ಕನ್ನಡಾಂಬೆ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರಣಿಗೆ ನಡೆಸಿ ನಂತರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸುತ್ತೇವೆ. ಎಲ್ಲ ಕನ್ನಡ ಪರ ಸಂಘಟನೆಗಳವರು ಖಾಸಗಿ ಶಾಲೆಯವರು ತಮಗೆ ಬೆಂಬಲ ನೀಡಿದ್ದಾರೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.