ಬೀದರ್: ‘ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಭಾನುವಾರ (ಮೇ 25) ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಹಮ್ಮಿಕೊಳ್ಳಲಾಗಿದೆ’ ಎಂದು ಬುದ್ಧಿಷ್ಟ್ ಎಜ್ಯುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಎಸ್.ರಾಂಪುರೆ ತಿಳಿಸಿದರು.
ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಗ್ರಾಮೀಣ ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಶಿಕ್ಷಣ, ಅನಾಥ ಮಕ್ಕಳಿಗೆ ಉಚಿತ ಪಠ್ಯ ಪುಸ್ತಕ ಹಾಗೂ ಸಮವಸ್ತ್ರ ವಿತರಣಾ ಕಾರ್ಯಕ್ರಮವೂ ಇದರೊಂದಿಗೆ ನಡೆಯಲಿದೆ ಎಂದು ವಿವರಿಸಿದರು.
ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಬುದ್ಧಿಷ್ಟ್ ಎಜ್ಯುಕೇಶನ್ ಮತ್ತು ಚಾರಿಟಬಲ್ ಟ್ರಸ್ಟ್ ಹಾಗೂ ರಾಂಪೂರೆ ಫೌಂಡೇಶನ್ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾತಿ, ಮತ ಲೆಕ್ಕಿಸದೆ ಸರ್ವರಿಗೂ ಉತ್ತಮವಾದ ಶಿಕ್ಷಣ ಕೊಟ್ಟು ಮುಖ್ಯವಾಹಿನಿಗೆ ತರುವ ಉದ್ದೇಶ ನಮ್ಮದು ಎಂದು ಹೇಳಿದರು.
ಮಧ್ಯಾಹ್ನ 12ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಂ ಖಾನ್ ಅಧ್ಯಕ್ಷತೆ ವಹಿಸುವರು. ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು, ಆಣದೂರಿನ ಜ್ಞಾನಸಾಗರ ಭಂತೆ ಸಾನ್ನಿಧ್ಯ ವಹಿಸುವರು. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ, ಉದಗೀರ ಶಾಸಕ ಸಂಜಯ್ ಬನಸೋಡೆ, ಸಂಸದ ಸಾಗರ್ ಖಂಡ್ರೆ, ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದು ವಿವರಿಸಿದರು.
ಪ್ರಮುಖರಾದ ಚರಣದೀಪ ಆಣದೂರೆ, ಅನಿಲ ಚಿಂಚೋಳೆ, ಶ್ರೀಕಾಂತ ಭವಾನಿ, ಧನರಾಜ ಜಿ., ದಿನೇಶ ಸೋನಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.