ಔರಾದ್: ಮಹಾರಾಷ್ಟ್ರ ಗಡಿಗೆ ಹೊಂದಿಕೊಂಡಿರುವ ತಾಲ್ಲೂಕಿನ ಹಂಗರಗಾ ಗ್ರಾಮದಲ್ಲಿ ನೂತನ ಪ್ರೌಢ ಶಾಲೆ ಕಟ್ಟಡವನ್ನು ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಉದ್ಘಾಟಿಸಿದರು.
ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆ ಅಡಿ ₹ 57 ಲಕ್ಷ ವೆಚ್ಚದಲ್ಲಿ ಈ ಕಟ್ಟಡ ನಿರ್ಮಾಣ ಆಗಿದೆ.
‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲಾ ಕಾಲೇಜುಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಒತ್ತು ನೀಡಲಾಗಿದೆ. ಹೀಗಾಗಿ ಅಗತ್ಯವಿರುವ ಕಡೆ ಶಾಲಾ ಕೊಠಡಿ, ಕಂಪ್ಯೂಟರ್, ವಾಚನಾಲಯ, ಪ್ರಯೋಗಾಲಯ ಕೊಠಡಿ ನಿರ್ಮಿ ಸಲಾಗುತ್ತಿದೆ’ ಎಂದು ಸಚಿವಚವಾಣ್ ಹೇಳಿದರು.
‘ನನಗೆ ಮೊದಲಿನಿಂದಲೂ ಶಿಕ್ಷಣದ ಬಗ್ಗೆ ಹೆಚ್ಚಿನ ಆಸಕ್ತಿ ಇದೆ. ನಮ್ಮ ಮಕ್ಕಳು ಚೆನ್ನಾಗಿ ಓದಿ ಮುಂದೆ ಬಂದರೆ ನಮಗೂ ಗೌರವ ಸಿಗುತ್ತದೆ. ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಯಾವುದೇ ಕೊರತೆಯಾಗದಂತೆ ಕಾಳಜಿ ವಹಿಸಿದೆ’ ಎಂದರು.
‘ಈ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ತುಂಬಲು ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಕಲಿಕೆಗೆ ಹಿನ್ನಡೆಯಾಗದಂತೆ ಅಗತ್ಯವಿರುವ ಕಡೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಆದೇಶ ನೀಡಲಾಗಿದೆ. ಶಿಕ್ಷಕರು ಇನ್ನಷ್ಟು ಕಾಳಜಿ ವಹಿಸಿ ಪಾಠ ಮಾಡಿದರೆ ನಮ್ಮ ಮಕ್ಕಳು ರಾಜ್ಯ ಮಟ್ಟದ ವಿದ್ಯಾರ್ಥಿಗಳ ಜತೆ ಸ್ಪರ್ಧೆ ಮಾಡಲಿದ್ದಾರೆ’ ಎಂದು ಸಚಿವರು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಮಾರುತಿ ಚವಾಣ್, ತಾಲ್ಲೂಕು ಪಂಚಾಯಿತಿ ಸದಸ್ಯ ಸಚಿನ್ ರಾಠೋಡ್, ಮುಖಂಡ ರಾಮಶೆಟ್ಟಿ ಪನ್ನಾಳೆ, ಕೇರಬಾ ಪವಾರ್, ಬಾಲಾಜಿ ನಾಯಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎಸ್. ನಗನೂರ, ಮುಖ್ಯಶಿಕ್ಷಕ ದೇವಿದಾಸ ಪಾಟೀಲ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.