ಬೀದರ್: ‘ಅನ್ಯಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಅವರು ಆಹಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಗುರುವಾರ ನಡೆದ ಪಂಚ ಗ್ಯಾರಂಟಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ 15,03,363 ಫಲಾನುಭವಿಗಳಿಗೆ ₹333.28 ಕೋಟಿ ಅನುದಾನ ಬಳಕೆಯಾಗಿದೆ. ಜುಲೈ 2023 ರಿಂದ ಜನವರಿ 2025ರ ವರೆಗೆ 5 ಕೆಜಿ ಅಕ್ಕಿ ಮತ್ತು ಉಳಿದ 5 ಕೆಜಿ ಅಕ್ಕಿಯ ಮೊತ್ತವನ್ನು ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಆದರೆ, ಫೆಬ್ರವರಿ 2025 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತಿದೆ ಎಂದರು.
ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಸರಿಯಾದ ರೀತಿಯಲ್ಲಿ ಜನರಿಗೆ ತಲುಪಿಸಿ ಎಂದ ಅವರು, ಜಿಲ್ಲೆಯ ಒಟ್ಟು ಕುಟುಂಬದ ಮಹಿಳಾ ಮುಖ್ಯಸ್ಥೆಯ ಹೆಸರಿನಲ್ಲಿರುವ ಪಡಿತರ ಚೀಟಿಗಳ ಸಂಖ್ಯೆ 3,81,970 ಇದ್ದು, ಇದರಲ್ಲಿ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಜುಲೈ 30ಕ್ಕೆ 3,54,701 ಫಲಾನುಭವಿಗಳು ನೋಂದಣಿ ಆಗಿದ್ದಾರೆ. ಪ್ರತಿ ತಿಂಗಳು ತಲಾ ₹2 ಸಾವಿರದಂತೆ ಒಟ್ಟು ₹1,271.80 ಕೋಟಿ ಹಣ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತಿದೆ ಎಂದು ವಿವರಿಸಿದರು.
ಯುವನಿಧಿ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 11,181 ಮಂದಿ ಹೆಸರು ನೋಂದಣಿ ಮಾಡಿಸಿದ್ದು, ಇದರಲ್ಲಿ 7,853 ಪದವಿ ಅಭ್ಯರ್ಥಿಗಳು ಮತ್ತು 172 ಡಿಪ್ಲೊಮಾ ಅಭ್ಯರ್ಥಿ ಫಲಾನುಭವಿಗಳಿಗೆ ₹20.97 ಕೋಟಿ ಅನುದಾನ ಬಳಕೆಯಾಗಿದೆ. ಯುವನಿಧಿ ಯೋಜನೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ರೀತಿಯಲ್ಲಿ ಪ್ರಚಾರ ಕೈಗೊಳ್ಳಬೇಕು. ತಾಲ್ಲೂಕು ಮಟ್ಟದಲ್ಲೂ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು.
ಜಿಲ್ಲೆಯಲ್ಲಿ ಗೃಹ ಜ್ಯೋತಿ ಯೋಜನೆಯ ಅಡಿಯಲ್ಲಿ ಒಟ್ಟು ₹3,55,457 ಫಲಾನುಭವಿಗಳಿದ್ದು ₹357.02 ಕೋಟಿ ಅನುದಾನ ಬಳಕೆಯಾಗಿದೆ. ಶಕ್ತಿ ಯೋಜನೆಯ ಅಡಿಯಲ್ಲಿ ಜಿಲ್ಲೆಯಲ್ಲಿ 2023ರ ಜೂನ್ 11ರಿಂದ 2025ರ ಜುಲೈ 18ರ ವರೆಗೆ ಒಟ್ಟು 8.75 ಕೋಟಿ ಫಲಾನುಭವಿಗಳು ಸೌಲಭ್ಯ ಪಡೆದಿದ್ದಾರೆ ಎಂದರು.
ವಿಭಾಗದ ವಾಹನದಲ್ಲಿ ಪ್ರತಿ ದಿನ ಸರಾಸರಿ 1.14 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ಇದಕ್ಕೆ ₹252.35 ಕೋಟಿ ಸಂದಾಯವಾಗಿದೆ. ಕಳೆದ ಸಭೆಯ ಬೇಡಿಕೆಯಂತೆ ಬಸ್ ಸಮಸ್ಯೆ ಇರುವ ಕಡೆಗೆ ಬಸ್ಸಿನ ವ್ಯವಸ್ಥೆ ಮಾಡಲಾಗಿದೆ. ಕೆಲವು ಕಡೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದ್ದು, ಸಮಸ್ಯೆಯನ್ನು ತಕ್ಷಣ ಪರಿಹರಿಸಬೇಕು ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಮ್.ಎಚ್., ಜೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಮೇಶ ಪಾಟೀಲ್, ಕೆಕೆಆರ್‌ಟಿಸಿ ಬೀದರ್ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಕಾಂತ ಫುಲೇಕರ್, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ವಿ. ಪ್ರಭಾಕರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಪ್ರವೀಣ್ ಹಾಗೂ ತಾಲ್ಲೂಕುಮಟ್ಟದ ಅಧಿಕಾರಿಗಳು ಇದ್ದರು.
‘ಸಮಸ್ಯೆಗೆ ಸ್ಪಂದಿಸದಿದ್ದರೆ ಕ್ರಮ’
‘ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ದೂರು ಸಲ್ಲಿಸಬೇಕು. ಒಂದು ವೇಳೆ ಅವರು ಸಮಸ್ಯೆಗೆ ಸ್ಪಂದಿಸದಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ತಿಳಿಸಿದರು. ಪ್ರಾಮಾಣಿಕವಾಗಿ ಜನರಿಗೆ ಪಂಚ ಗ್ಯಾರಂಟಿಗಳು ತಲುಪಿಸುವ ಕೆಲಸ ಹಾಗೂ ಇವುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ಕಾರ್ಯ ಸಂಬಂಧಿಸಿದ ಅಧಿಕಾರಿಗಳು ಮಾಡಬೇಕು ಎಂದು ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.