ADVERTISEMENT

ಸಿದ್ಧರಾಮೇಶ್ವರ ಜಯಂತಿ ಸಿದ್ಧತೆಗೆ ಸೂಚನೆ

ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 3 ಜನವರಿ 2019, 14:02 IST
Last Updated 3 ಜನವರಿ 2019, 14:02 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯ ಪೂರ್ವಭಾವಿ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು   

ಬೀದರ್: ‘ಜನವರಿ 15ರಂದು ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದಲ್ಲಿ ಗುರುವಾರ ನಡೆದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜ. 15ರಂದು ಬೆಳಿಗ್ಗೆ 9ಕ್ಕೆ ಸರ್ಕಾರಿ, ಅರೆ ಸರ್ಕಾರಿ ಕಚೇರಿಗಳಲ್ಲಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಬೇಕು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂಜೆ ನೆರವೇರಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಯು ನಗರದ ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿ ಜಿಲ್ಲಾ ರಂಗಮಂದಿರಕ್ಕೆ ತಲುಪಲಿದೆ. ಮಧ್ಯಾಹ್ನ 12 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ ಮಾಹಿತಿ ನೀಡಿದರು.

ಜಿಲ್ಲೆಯ ಶಾಲಾ ಕಾಲೇಜುಗಳಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರವನ್ನು ಅಚ್ಚುಕಟ್ಟಾದ ಸ್ಥಳದಲ್ಲಿಟ್ಟು ಪೂಜೆ ಸಲ್ಲಿಸುವಂತೆ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ADVERTISEMENT

ಭೋವಿ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಮಾಣಿಕರಾವ್ ವಾಡೇಕರ್ ಮಾತನಾಡಿ, ‘ಶಿವಯೋಗಿ ಸಿದ್ಧರಾಮೇಶ್ವರರು ಸಮಾಜ ಸುಧಾರಣೆಯಲ್ಲಿ ತಮ್ಮದೆಯಾದ ಕೊಡುಗೆ ನೀಡಿದ್ದಾರೆ. ಜಿಲ್ಲೆಯಲ್ಲಿ ಅವರ ಸ್ಮಾರಕ ನಿರ್ಮಾಣವಾಗಬೇಕು. ನಗರದ ಒಂದು ವೃತ್ತಕ್ಕೆ ಅವರ ಹೆಸರನ್ನು ನಾಮಕರಣ ಮಾಡಬೇಕು’ ಎಂದು ಮನವಿ ಮಾಡಿದರು.

‘ಮೆರವಣಿಗೆಗೆ ವಾಹನ ಒದಗಿಸಬೇಕು. ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಮಾಡಬೇಕು. ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಸ್ವಚ್ಛತೆ ಕಾಪಾಡಬೇಕು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು’ ಎಂದು ನಗರಸಭೆ ಅಧಿಕಾರಗಳಿಗೆ ಸೂಚಿಸಿದರು.

ಡಿವೈಎಸ್ಪಿ ಎಸ್.ವೈ ಹುಣಸಿಕಟ್ಟಿ, ಕರ್ನಾಟಕ ಜಾನಪದ ಅಕಾಡಮಿ ಸದಸ್ಯ ವಿಜಯಕುಮಾರ ಸೋನಾರೆ, ಪುಂಡಲೀಕರಾವ್ ಲಿಂಗದಳ್ಳಿಕರ್, ಅಂಬಾದಾಸ್ ಪವಾರ್, ಸಂತೋಷ, ಬಾಬು ವಾಲಿ, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.