ADVERTISEMENT

ಜಮೀನುಗಳ ರಸ್ತೆ ಸಮಸ್ಯೆ ಪರಿಹರಿಸಿ

ಕೆಡಿಪಿ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2022, 15:48 IST
Last Updated 4 ಜುಲೈ 2022, 15:48 IST
ಬೀದರ್‌ನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಬಂಡೆಪ್ಪ ಕಾಶೆಂಪುರ ಅವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಅಣ್ಣಾರಾವ್ ಪಾಟೀಲ, ಮಾಣಿಕರಾವ್ ಪಾಟೀಲ ಇದ್ದರು
ಬೀದರ್‌ನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಶಾಸಕ ಬಂಡೆಪ್ಪ ಕಾಶೆಂಪುರ ಅವರು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದರು. ಅಣ್ಣಾರಾವ್ ಪಾಟೀಲ, ಮಾಣಿಕರಾವ್ ಪಾಟೀಲ ಇದ್ದರು   

ಬೀದರ್: ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ರೈತರ ಜಮೀನುಗಳ ರಸ್ತೆ ಸಮಸ್ಯೆ ಕೂಡಲೇ ಬಗೆಹರಿಸಬೇಕು ಎಂದು ಶಾಸಕ ಬಂಡೆಪ್ಪ ಕಾಶೆಂಪುರ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಳೆಗಾಲ ಆರಂಭವಾಗಿದೆ. ರೈತರು ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ಅನೇಕ ಗ್ರಾಮಗಳ ರೈತರು ಜಮೀನಿಗೆ ತೆರಳುವ ರಸ್ತೆಗಳು ಹಾಳಾಗಿರುವ ಬಗ್ಗೆ ತಮ್ಮ ಗಮನ ಸೆಳೆದಿದ್ದಾರೆ. ಹೀಗಾಗಿ ಅಧಿಕಾರಿಗಳು ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ರೈತರ ಹೊಲಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಕುರಿತು ಆಯಾ ಗ್ರಾಮ ಪಂಚಾಯಿತಿಗಳ ಪಿಡಿಒಗಳು 15 ದಿನಗಳ ಒಳಗೆ ಮಾಹಿತಿ ಕೊಡಬೇಕು ಎಂದು ತಿಳಿಸಿದರು.
ಜೆಸ್ಕಾಂ ಅಧಿಕಾರಿಗಳು ಎಸ್.ಎಂ. ಕೃಷ್ಣನಗರದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಆಯುಷ್ಮಾನ್ ಭಾರತ ಆರೋಗ್ಯ ಕಾರ್ಡ್ ನೋಂದಣಿ ಚುರುಕುಗೊಳಿಸಬೇಕು. ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸಬೇಕು ಎಂದು ಸೂಚನೆ ನೀಡಿದರು.
ಗೋರನಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕೇವಲ ಐವತ್ತು ವಿದ್ಯಾರ್ಥಿಗಳು ಓದುತ್ತಿದ್ದಾರೆ. ಈ ರೀತಿ ಪರಿಸ್ಥಿತಿ ಮುಂದುವರಿದರೆ ಹೇಗೆ, ಕಲಿಕಾ ಗುಣಮಟ್ಟ ಸುಧಾರಿಸುವತ್ತ ಅಧಿಕಾರಿಗಳು ಗಮನ ಹರಿಸಬೇಕು. ಸಮಾಜ ಕಲ್ಯಾಣ ಇಲಾಖೆಯ ಅನುದಾನದ ಸಮುದಾಯ ಭವನಗಳಿಗೆ ನಾಲ್ಕು ವರ್ಷ ಕಳೆದರೂ ಚಾಲನೆ ಸಿಗದಿದ್ದರೆ ಹೇಗೆ, ಈ ಬಗ್ಗೆ ಮಾಹಿತಿ ಕೊಡಬೇಕು ಎಂದು ಹೇಳಿದರು.
ಕೃಷಿ, ಕುಡಿಯುವ ನೀರು ಮತ್ತು ನೈರ್ಮಲ್ಯ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ, ಪಶು ಸಂಗೋಪನೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ತೋಟಗಾರಿಕೆ, ಸಮಾಜ ಕಲ್ಯಾಣ, ಸಣ್ಣ ನೀರಾವರಿ, ಸಾಮಾಜಿಕ ಅರಣ್ಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸೇರಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಹಶೀಲ್ದಾರ್ ಅಣ್ಣಾರಾವ್ ಪಾಟೀಲ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಾಣಿಕರಾವ್ ಪಾಟೀಲ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.