ADVERTISEMENT

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ: ದಶಕದ ಸಂಭ್ರಮದಲ್ಲಿ ಖರ್ಗೆಗೆ ಅಭಿನಂದನೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2024, 12:22 IST
Last Updated 12 ಫೆಬ್ರುವರಿ 2024, 12:22 IST
   

ಬೀದರ್‌: ‘ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿರುವ ಸಂವಿಧಾನದ 371(ಜೆ) ಅನುಷ್ಠಾನಗೊಂಡು ಹತ್ತು ವರ್ಷ ಪೂರೈಸಿದ್ದು, ಇದರ ರೂವಾರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಭಿನಂದನಾ ಸಮಾರಂಭ ಫೆ. 20ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಜನ, ಸಂಘ ಸಂಸ್ಥೆಗಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಸೋಮವಾರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಖರ್ಗೆ ಅವರ ವಿಶೇಷ ಶ್ರಮದಿಂದ 371(ಜೆ) ಅನುಷ್ಠಾನಗೊಂಡಿದ್ದು, ಇದರ ಪರಿಣಾಮ ಕಲ್ಯಾಣ ಕರ್ನಾಟಕ ಭಾಗದ ಸಾವಿರಾರು ಯುವಜನರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಲಭ್ಯವಾಗಿದೆ. ‌ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ. ವಾರ್ಷಿಕ ಮಂಡಳಿಗೆ ₹3 ಸಾವಿರ ಕೋಟಿಗೂ ಅಧಿಕ ಅನುದಾನ ಲಭ್ಯವಾಗುತ್ತಿದೆ ಎಂದು ಹೇಳಿದ್ದಾರೆ.

ADVERTISEMENT

ಯು.ಪಿ.ಎ. ಸರ್ಕಾರದ ಅವಧಿಯಲ್ಲಿ ಅಂದಿನ ಪ್ರಧಾನಿ ಡಾ. ಮನಮೋಹನ್‌ ಸಿಂಗ್, ಯುಪಿಎ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ಅವರ ಬಳಿಗೆ ಹಲವು ಬಾರಿ ನಿಯೋಗ ತೆಗೆದುಕೊಂಡು ಹೋಗಿ, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ 371(ಜೆ) ತಿದ್ದುಪಡಿಗೆ ಮಲ್ಲಿಕಾರ್ಜುನ ಖರ್ಗೆ ಅವಿರತ ಶ್ರಮಿಸಿದ್ದಾರೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.