
ಭಾಲ್ಕಿ: ‘ಇಂದಿನ ಮಕ್ಕಳಲ್ಲಿ ಬುದ್ದಿಮಟ್ಟ ಹೆಚ್ಚುತ್ತಿದೆ. ಆದರೆ, ಕ್ರೀಡೆಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳದೆ ಇರುವುದರಿಂದ ದೈಹಿಕ ಬೆಳವಣಿಗೆ ಕುಸಿಯುತ್ತಿದೆ. ಅನಾರೋಗ್ಯ ಮಕ್ಕಳನ್ನು ಕಾಡುತ್ತಿದೆ’ ಎಂದು ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು.
ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್ ವತಿಯಿಂದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ ನಿಮಿತ್ತ ಬುಧವಾರ ಆಯೋಜಿಸಿದ್ದ ಶಾಲಾ ಅಂತರ್ಗತ ವಾರ್ಷಿಕ ಕ್ರೀಡಾಕೂಟ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
‘ಮಕ್ಕಳ ಭವಿಷ್ಯದ ಸಾಧನೆಗೆ ಕ್ರೀಡೆಗಳು ಮೆಟ್ಟಿಲಾಗುತ್ತವೆ. ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಉತ್ಸಾಹ, ಉಲ್ಲಾಸ, ಹುಮ್ಮಸ್ಸು ಹೆಚ್ಚುತ್ತದೆ. ವಿದ್ಯಾಭ್ಯಾಸದ ಜತೆಗೆ ಸಮಯ ಸಿಕ್ಕಾಗಲೆಲ್ಲ ಮಕ್ಕಳು ಆಟವಾಡುವ ಪರಿಪಾಠ ಬೆಳೆಸಿಕೊಳ್ಳಬೇಕು’ ಎಂದು ತಿಳಿಸಿದರು.
ಕ್ರೀಡಾಕೂಟ ಉದ್ಘಾಟಿಸಿದ ಡಾ.ದಯಾನಂದ ಗೌಳಿ ಮಾತನಾಡಿ,‘ಕ್ರೀಡೆಗಳಲ್ಲಿ ಪಾಲ್ಗೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ. ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವುದನ್ನು ಬಿಟ್ಟು ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು’ ಎಂದರು.
ಹಿರೇಮಠ ಸಂಸ್ಥಾನದ ಕಾರ್ಯದರ್ಶಿ ಮಹಾಲಿಂಗ ಸ್ವಾಮೀಜಿ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿದರು.
ಆಣದೂರ ಸ್ವಾಮಿ ವಿವೇಕಾನಂದ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚೇತನ ಸೊರಳ್ಳಿ ಬಸವ ಗುರುವಿನ ಪೂಜೆ ನೆರವೇರಿಸಿದರು.
ಉದ್ಯಮಿ ಸತೀಶ ಜೀರಗೆ, ತಳವಾಡ (ಕೆ) ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಭುಶೆಟ್ಟಿ ಕುರುಬಖೇಳಗಿ, ಯುವ ಮುಖಂಡ ವಿಶಾಲ ಅತಿವಾಳ, ಚನ್ನಬಸವೇಶ್ವರ ಗುರುಕುಲ ಪ್ರೌಢಶಾಲೆಯ ಮುಖ್ಯಶಿಕ್ಷಕ ಮಹೇಶ ಮಹಾರಾಜ, ದೈಹಿಕ ಶಿಕ್ಷಣ ನಿರ್ದೇಶಕ ಅನಿಲ್ ಪಾಟೀಲ, ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಶ್ರೀದೇವಿ ಕುಲಕರ್ಣಿ ಸೇರಿದಂತೆ ಹಲವರು ಇದ್ದರು. ಮುಖ್ಯಶಿಕ್ಷಕ ಮಹೇಶ ಕುಲಕರ್ಣಿ ಸ್ವಾಗತಿಸಿದರು. ಲಕ್ಷ್ಮಣ ಮೇತ್ರೆ ನಿರೂಪಿಸಿದರು. ಮಲ್ಲಪ್ಪ ಮಾದರ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.