ADVERTISEMENT

ನೀರಿನ ಕಾಮಗಾರಿ ಆರಂಭಿಸಲು ಜಿ.ಪಂ. ಅಧ್ಯಕ್ಷೆ ಸೂಚನೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2020, 15:51 IST
Last Updated 10 ಜನವರಿ 2020, 15:51 IST
ಬೀದರ್‌ನಲ್ಲಿ ಶುಕ್ರವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಶಿವಾಜಿ ಢೋಣೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದರು
ಬೀದರ್‌ನಲ್ಲಿ ಶುಕ್ರವಾರ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಶಿವಾಜಿ ಢೋಣೆ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಇದ್ದರು   

ಬೀದರ್: ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆ ನಡೆಯಿತು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ ಮಾತನಾಡಿ, ‘ತಮ್ಮ ವಿವೇಚನಾ ಯೋಜನೆಯಡಿ ಸರ್ಕಾರದಿಂದ ಬಿಡುಗಡೆಯಾದ ₹ 1 ಕೋಟಿ ಅನುದಾನದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಆದ್ಯತೆಯ ಮೇರೆಗೆ ಯೋಜನೆ ಸಿದ್ಧಪಡಿಸಿ ಕಾಮಗಾರಿ ಪ್ರಾರಂಭಿಸಬೇಕು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

‘ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ ಗ್ರಾಮಗಳ ಮಾಹಿತಿ ಪಡೆದು ಕಾಮಗಾರಿ ಪ್ರಾರಂಭಿಸಲಾಗುವುದು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಂಜಿನಿಯರ್ ಶಿವಾಜಿ ಢೋಣೆ ತಿಳಿಸಿದರು.

ADVERTISEMENT

ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದಂತೆ ಸ್ವಯಂ ಸೇವಾ ಸಂಸ್ಥೆಗಳಿಂದ ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಆದರೆ ಯಾವ ಕಾರ್ಯಕ್ರಮವನ್ನೂ ಜನಪ್ರತಿನಿಧಿಗಳ ಗಮನಕ್ಕೆ ತರುತ್ತಿಲ್ಲ ಎನ್ನುವ ದೂರುಗಳು ಕೇಳಿಬರುತ್ತಿವೆ. ಮುಂದೆ ಜಾಗೃತಿ ಮೂಡಿಸುವ ಗ್ರಾಮಗಳ ಪಟ್ಟಿಯನ್ನು ಸಿದ್ಧಪಡಿಸಿಕೊಂಡು ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಸದಸ್ಯರ ಹಾಗೂ ಅಧಿಕಾರಿಗಳ ಗಮನಕ್ಕೆ ತರಬೇಕು’ ಎಂದು ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ಸೂಚಿಸಿದರು.

‘ಮಾರ್ಚ್ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು. ಆದ್ದರಿಂದ ಕೂಡಲೇ ಯೋಜನೆ ರೂಪಿಸಿ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಲಕ್ಷ್ಮಣರಾವ್ ಬುಳ್ಳಾ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಉಷಾ ರಾಜೇಂದ್ರ, ಕೈಗಾರಿಕೆ ಮತ್ತು ಕೃಷಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮಂಜುಳಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.