ಬೀದರ್: ‘ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಇಕ್ಬಾಲ್ ಸಿಂಗ್ ಲಾಲಪೂರಾ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಅಲ್ಪಸಂಖ್ಯಾತರ ಸಮುದಾಯದ ಮುಖಂಡರೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಬೌದ್ಧ, ಜೈನ್ ಮತ್ತು ಪಾರ್ಸಿಗಳಿಗೆ ಅನೇಕ ಸೌಲಭ್ಯಗಳಿವೆ. ಅವುಗಳ ಸದುಪಯೋಗ ಪಡೆದುಕೊಳ್ಳಬೇಕು. ಭಾರತ ಜಗತ್ತಿನಲ್ಲಿಯೇ ಸಹಿಷ್ಣುತೆ ಹೊಂದಿರುವ ಏಕೈಕ ದೇಶ. ಎಲ್ಲರೂ ಒಂದಾಗಿ, ಸುರಕ್ಷಿತರಾಗಿ ದೇಶದ ಏಳಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು.
ಎಲ್ಲ ಹಂತಗಳಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶಗಳು, ಸ್ಥಾನಮಾನಗಳು ಸಿಗುತ್ತಿವೆ. ಉನ್ನತ ಸ್ಥಾನದಲ್ಲಿರುವವರು ಕ್ರಿಯಾಶೀಲರಾಗಿ ಕೆಲಸ ನಿರ್ವಹಿಸಿದರೆ ಯೋಜನೆಗಳು ತಳಮಟ್ಟಕ್ಕೆ ತಲುಪುತ್ತವೆ ಎಂದರು.
ಸಭೆಯಲ್ಲಿ ಭಾಗವಹಿಸಿದ ಮುಖಂಡರು ಅವರ ಸಮಸ್ಯೆಗಳನ್ನು ಹೇಳಿಕೊಂಡರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.