ADVERTISEMENT

ಗ್ರಹಣ ವೇಳೆ ಮಕ್ಕಳನ್ನು ಮಣ್ಣಿನಲ್ಲಿ ಹೂಳುವುದು ಅಪರಾಧ: ಸಿಇಒ

ಮೂಢನಂಬಿಕೆ ತೊಲಗಿಸಿ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2020, 3:48 IST
Last Updated 24 ಆಗಸ್ಟ್ 2020, 3:48 IST
ಬೀದರ್‍ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ತಾಲ್ಲೂಕು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು
ಬೀದರ್‍ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ತಾಲ್ಲೂಕು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಇದ್ದರು   

ಬೀದರ್: ಜಿಲ್ಲೆಯಲ್ಲಿ ಮೂಢನಂಬಿಕೆ ವಿರುದ್ಧ ಜನಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗ್ಯಾನೇಂದ್ರಕುಮಾರ ಗಂಗ್ವಾರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ತಾಲ್ಲೂಕು ಅಧಿಕಾರಿಗಳೊಂದಿಗೆ ವಿಡಿಯೊ ಸಂವಾದ ನಡೆಸಿದ ಅವರು, ಗ್ರಹಣದ ವೇಳೆ ಮಕ್ಕಳನ್ನು ಮಣ್ಣಿನಲ್ಲಿ ಹೂಳುವುದು ಅಪರಾಧವಾಗಿದೆ. ತಹಶೀಲ್ದಾರರು, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.

ವಿಶೇಷವಾಗಿ ಚಿಟಗುಪ್ಪ ತಾಲ್ಲೂಕಿನಲ್ಲಿ ಈ ಕುರಿತು ಅರಿವು ಮೂಡಿಸಲು ಬೀದಿ ನಾಟಕ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ರೂಪಿ ಸಬೇಕು. ತಾಲ್ಲೂಕಿನ ಫಾತ್ಮಾಪುರಕ್ಕೆ ಭೇಟಿ ಕೊಟ್ಟು ಅಂಗವಿಕಲ ಮಕ್ಕಳ ಮಾಹಿತಿ ಪಡೆಯಬೇಕು. ಸಮಸ್ಯೆ ಪರಿಹಾರಕ್ಕೆ ಆದ್ಯತೆ ನೀಡಬೇಕು. ಎಲ್ಲ ಗ್ರಾಮಗಳಲ್ಲೂ ಜಾಗೃತಿ ಜಾಥಾ ಆಯೋಜಿಸಬೇಕು ಎಂದು ತಿಳಿಸಿದರು.

ADVERTISEMENT

ಕಲಬುರ್ಗಿ ಜಿಲ್ಲೆಯಲ್ಲಿ ಗ್ರಹಣದ ವೇಳೆ ಮಕ್ಕಳನ್ನು ಹೊಂಡ, ತಿಪ್ಪೆಗುಂಡಿಗಳಲ್ಲಿ ಹೂಳುವ ಪದ್ಧತಿಯನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತೀವ್ರವಾಗಿ ಖಂಡಿಸಿದೆ. ಚಿಟಗುಪ್ಪ ಪಟ್ಟಣದ ವಾರ್ಡ್ ಸಂಖ್ಯೆ 23ರ ವ್ಯಾಪ್ತಿಯ ಫಾತ್ಮಾಪುರದಲ್ಲಿ ಗ್ರಹಣ ಸಂದರ್ಭದಲ್ಲಿ ಐವರು ಮಕ್ಕಳನ್ನು ಮಣ್ಣಿನಲ್ಲಿ ಹೂತಿದ್ದನ್ನೂ ಆಯೋಗ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದರು.

ಮೂಢನಂಬಿಕೆಗಳಿಂದ ಮಕ್ಕಳನ್ನು ರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ. ಅಧಿಕಾರಿಗಳು ಈ ನಿಟ್ಟಿನಲ್ಲಿ ಪ್ರತಿ ಸೋಮವಾರ ಸಭೆ ನಡೆಸಿ ಚರ್ಚಿಸಬೇಕು ಎಂದು ತಿಳಿಸಿದರು.

ಭಾಲ್ಕಿ, ಬಸವಕಲ್ಯಾಣ, ಔರಾದ್ ಹಾಗೂ ಬೀದರ್ ತಹಶೀಲ್ದಾರರು ತಮ್ಮ ತಾಲ್ಲೂಕುಗಳಲ್ಲಿ ಗ್ರಹಣದ ವೇಳೆ ಮಕ್ಕಳನ್ನು ಹೂಳುವ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲ ಎಂದು ಹೇಳಿದರು.

ಜಿಲ್ಲಾ, ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಅಂಗವಿಕರಿಗೆ ಕಡ್ಡಾಯವಾಗಿ ಆರೋಗ್ಯ ಕಾರ್ಯಕ್ರಮ ಸಂಘಟಿಸಬೇಕು. ಕಾರ್ಯಕ್ರಮದಲ್ಲಿ ಅಂಗವಿಕಲರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕೂಡ ನೋಡಿ ಕೊಳ್ಳಬೇಕು ಎಂದು ಸಿಇಒ ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬೀದರ್ ಉಪ ವಿಭಾಗಾಧಿಕಾರಿ ಅಕ್ಷಯ್ ಶ್ರೀಧರ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹ ಣಾಧಿಕಾರಿ ಧನರಾಜ ಬೋರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ವಿ.ಜಿ. ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಶ್ರೀಕಾಂತ ಕುಲಕರ್ಣಿ, ಜಿಲ್ಲಾ ವಿಕಲಚೇತನರ ಕಲ್ಯಾಣ ಇಲಾಖೆಯ ಅಧಿಕಾರಿ ಜಗದೀಶ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗೌರಿಶಂಕರ ಪ್ರತಾಪುರೆ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗೌತಮ ಸಿಂದೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.