ಬೀದರ್: ‘ಜಿಲ್ಲೆಯಲ್ಲಿ ಕದ್ದು ಮುಚ್ಚಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡಿದರೆ ಅಂತಹವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು’ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಅಬಕಾರಿ ಭವನದಲ್ಲಿ ಶನಿವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೀದರ್ ಜಿಲ್ಲೆ ತೆಲಂಗಾಣ, ಮಹಾರಾಷ್ಟ್ರದೊಂದಿಗೆ ಗಡಿ ಹಂಚಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗಿವೆ. ರಾಜ್ಯದ ಮದ್ಯ ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಸಾಗಣೆ ಮಾಡದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಹೊಸದಾಗಿ ಸಿಎಲ್–7 ಹೊಸ ಮದ್ಯದ ಅಂಗಡಿಗಳಿಗೆ ಪರವಾನಗಿ ಬಂದರೆ ಕೂಡಲೇ ಸರ್ಕಾರಕ್ಕೆ ವರದಿ ಸಲ್ಲಿಸಬೇಕು. ತಾಲ್ಲೂಕುಗಳಲ್ಲಿ ಅಬಕಾರಿ ಇಲಾಖೆಯ ಸ್ವಂತ ಕಟ್ಟಡಗಳಿಗೆ ಕೂಡಲೇ ಪ್ರಸ್ತಾವ ಸಲ್ಲಿಸಬೇಕು. ಜಿಲ್ಲೆಯಲ್ಲಿರುವ ಚೆಕ್‌ಪೋಸ್ಟ್‌ಗಳಲ್ಲಿ ಕಂಟೇನರಗಳ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.
ಸಭೆಯಲ್ಲಿ ಕಲಬುರಗಿ ವಿಭಾಗೀಯ ಅಬಕಾರಿ ಜಂಟಿ ಆಯುಕ್ತ ಬಸವರಾಜ ಹಡಪದ, ಬೀದರ್ ಜಿಲ್ಲಾ ಅಬಕಾರಿ ಮುಖ್ಯಸ್ಥ ನಿಂಗನಗೌಡ ಪಾಟೀಲ, ಉಪಾಧ್ಯಕ್ಷ ಆನಂದ ಉಕ್ಕಲಿ, ಅಬಕಾರಿ ಇಲಾಖೆ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.