ಬೀದರ್: ‘ಜಿಲ್ಲೆಯ ಜನರಿಗೆ ಯಾವುದೇ ರೀತಿಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮವಹಿಸಬೇಕು’ ಎಂದು ಅಧಿಕಾರಿಗಳಿಗೆ ಅರಣ್ಯ, ಜೈವಿಕ ಹಾಗೂ ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಹಾಗೂ ಮಳೆ ಹಾನಿಯ ಕುರಿತು ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
‘ಕೆಲವೊಂದು ಬಾರಿ ವಿದ್ಯುತ್ ಟ್ರಿಪ್ ಆಗುತ್ತಿರುವುದರಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಕೂಡಲೇ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಬೇಕು. ಟೆಂಡರ್ ಇಲ್ಲದೇ ಕಾಮಗಾರಿ ಕೈಗೊಳ್ಳುತ್ತಿರುವ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಟೆಂಡರ್ ಇಲ್ಲದೇ ಯಾರಿಗೂ ಕಾಮಗಾರಿ ಕೈಗೊಳ್ಳಲು ಅವಕಾಶ ನೀಡಬಾರದು’ ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
‘ಮಳೆಹಾನಿ ಕುರಿತು ಸಂಪೂರ್ಣ ಮಾಹಿತಿ ಕಲೆ ಹಾಕಿ ನಿಯಮದಡಿ ಪರಿಹಾರಕ್ಕೆ ಕ್ರಮವಹಿಸಬೇಕು. ನಗರದಲ್ಲಿ ಚರಂಡಿಗಳು ತುಂಬಿ ತುಳುಕುತ್ತಿರುವುದು ಕಂಡು ಬರುತ್ತಿದೆ. ಒಂದು ವಾರದೊಳಗೆ ಚರಂಡಿ ಸ್ವಚ್ಛತೆಗೆ ಕ್ರಮವಹಿಸಬೇಕು. ಇಲ್ಲದಿದ್ದರೆ ಸಬಂಧಪಟ್ಟವರ ವಿರುದ್ಧ ಕ್ರಮವಹಿಸಲಾಗುವುದು’ ಎಂದು ಅಧಿಕಾರಿಗಳಿಗೆ ಸಚಿವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಖಾತೆ ಸಚಿವ ರಹೀಂ ಖಾನ್, ನಗರಸಭೆ ಅಧ್ಯಕ್ಷ ಮೊಹ್ಮದ್ ಗೌಸ್, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿ.ಪಂ. ಸಿಇಒ ಡಾ.ಗಿರೀಶ್ ಬದೋಲೆ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.