ADVERTISEMENT

ಕೊರೊನಾ ನಂತರ ಶಿಕ್ಷಕರ ದಿನಾಚರಣೆ ಬೃಹತ್ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2020, 16:35 IST
Last Updated 3 ಸೆಪ್ಟೆಂಬರ್ 2020, 16:35 IST
ಸಚಿವ ಪ್ರಭು ಚವಾಣ್
ಸಚಿವ ಪ್ರಭು ಚವಾಣ್   

ಬೀದರ್: ಕೊರೊನಾ ಸೋಂಕಿನ ಸಂಕಷ್ಟ ದೂರವಾದ ನಂತರ ಜಿಲ್ಲಾಮಟ್ಟದಲ್ಲಿ ದೊಡ್ಡ ಪ್ರಮಾಣದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಆಯೋಜಿಸಿ ಶಿಕ್ಷಕರನ್ನು ಗೌರವಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಶಿಕ್ಷಕರ ದಿನಾಚರಣೆಯನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಕೊರೊನಾ ಕಾರಣ ಸಭೆ, ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಕಳೆದ ಹಲವು ವರ್ಷಗಳಿಂದ ಔರಾದ್ ತಾಲ್ಲೂಕಿನಲ್ಲಿ ಶಿಕ್ಷಕರನ್ನು ಗೌರವಿಸುವ ಮಹತ್ವದ ಕಾರ್ಯವನ್ನು ಮುಂದುವರಿಸಿಕೊಂಡು ಬರಲಾಗಿದೆ. ಪರಿಣಾಮವಾಗಿ, ತಾಲ್ಲೂಕಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಗಣನೀಯ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ADVERTISEMENT

ಶಿಕ್ಷಕರು ಕರ್ತವ್ಯದಿಂದ ವಿಮುಖವಾಗಬಾರದು. ಕೊರೊನಾ ಕಾರಣ ವಠಾರ ಶಾಲೆಗಳನ್ನು ಶಿಸ್ತುಬದ್ಧ ರೀತಿಯಲ್ಲಿ ನಡೆಸಿಕೊಂಡು ಹೋಗಬೇಕು. ಕೊರೊನಾ ಮುಂಜಾಗ್ರತಾ ಕ್ರಮಗಳನ್ನು ಮಕ್ಕಳಿಗೆ ತಿಳಿಸಬೇಕು. ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನದ ಪ್ರಯುಕ್ತ ದೇಶದಾದ್ಯಂತ ಏಳು ದಿನಗಳ ಶೋಕಾಚರಣೆ ಇರುವ ಕಾರಣ ಸೆಪ್ಟೆಂಬರ್ 5 ರಂದು ಆಯಾ ಶಾಲೆಗಳಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶಿಕ್ಷಕರ ದಿನವನ್ನು ಸರಳವಾಗಿ ಆಚರಿಸಬೇಕು ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.