ADVERTISEMENT

ಬಿಜೆಪಿ ಸರ್ಕಾರ ಅವಧಿ ಪೂರ್ಣ ಅನುಮಾನ; ಎಸ್.ಆರ್.ಪಾಟೀಲ ಹೇಳಿಕೆ

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 11:06 IST
Last Updated 12 ಆಗಸ್ಟ್ 2021, 11:06 IST
ಎಸ್.ಆರ್.ಪಾಟೀಲ
ಎಸ್.ಆರ್.ಪಾಟೀಲ   

ಬೀದರ್‌: ‘ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಅವಧಿ ಪೂರ್ಣಗೊಳಿಸುವುದು ಅನುಮಾನ’ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಹೇಳಿದರು.

‘ಹಿಂದಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಇದ್ದ ಹಿಡಿತ ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇಲ್ಲ. ಸಚಿವ ಸ್ಥಾನ ಸಿಗದವರು ತೃಪ್ತಿಯಿಂದ ಇಲ್ಲ. ಸಚಿವ ಸ್ಥಾನ ಪಡೆದವರೂ ಸಂತೋಷದಿಂದ ಇಲ್ಲ. ಒಟ್ಟಾರೆ ಬಿಜೆಪಿ ಒಡೆದ ಮನೆಯಾಗಿದೆ’ ಎಂದು ನಗರದಲ್ಲಿ ಗುರುವಾರ ಮಾಧ್ಯಮಗೋಷ್ಠಿಯಲ್ಲಿ ಟೀಕಿಸಿದರು.

‘ಸರ್ಕಾರ ಇನ್ನೂ ಪಿಕ್‌ಅಪ್‌ ಆಗಿಲ್ಲ. ಮುಖ್ಯಮಂತ್ರಿ ಹೊಂದಾಣಿಕೆಯಲ್ಲೇ ಇದ್ದಾರೆ. ರಾಜ್ಯದಲ್ಲಿ ಅತಿವೃಷ್ಟಿ ಹಾಗೂ ಕೋವಿಡ್‌ನಿಂದ ಜನ ಸಂಕಷ್ಟದಲ್ಲಿದ್ದರೂ ಸರ್ಕಾರ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅಧಿಕಾರಕ್ಕಾಗಿ ಕಿತ್ತಾಡುತ್ತಿರುವುದು ರಾಜ್ಯದ ದುರಂತ’ ಎಂದರು.

ADVERTISEMENT

‘ಕೋವಿಡ್‌ ಸಾವಿಗೆ ಸರ್ಕಾರವೇ ಕಾರಣ. ರಾಜ್ಯ ಸರ್ಕಾರ ಕೋವಿಡ್‌ ಎರಡನೇ ಅಲೆಯಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯನ್ನು ಮರೆ ಮಾಚಿದೆ. ಹೀಗಾಗಿ ಕಾಂಗ್ರೆಸ್‌ ಸಮೀಕ್ಷೆ ಆರಂಭಿಸಿದೆ. ಕೋವಿಡ್‌ ಅವಧಿಯಲ್ಲಿ ಮೃತಪಟ್ಟವರ ಮನೆಗಳಿಗೆ ಭೇಟಿ ಕೊಟ್ಟು ಮಾಹಿತಿ ಪಡೆದು ಸರ್ಕಾರಕ್ಕೆ ನೈಜ ವರದಿ ಸಲ್ಲಿಸಲಿದೆ’ ಎಂದು ತಿಳಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.