ADVERTISEMENT

ಬಿಜೆಪಿ ಮೊದಲೇ ಹೋಳಾಗಿದೆ: ಬಸವಕಲ್ಯಾಣದಲ್ಲಿ ಅಸಾದುದ್ದೀನ್ ಓವೈಸಿ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 5:07 IST
Last Updated 7 ಏಪ್ರಿಲ್ 2021, 5:07 IST
ಬಸವಕಲ್ಯಾಣದಲ್ಲಿ ಮಂಗಳವಾರ ನಡೆದ ಎಐಎಂಐಎಂ ಪ್ರಚಾರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಪಕ್ಷದ ಅಭ್ಯರ್ಥಿ ಅಬ್ದುಲ್ ರಜಾಕ್ ಚೌಧರಿ ಪಾಲ್ಗೊಂಡಿದ್ದರು
ಬಸವಕಲ್ಯಾಣದಲ್ಲಿ ಮಂಗಳವಾರ ನಡೆದ ಎಐಎಂಐಎಂ ಪ್ರಚಾರ ಸಭೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ, ಪಕ್ಷದ ಅಭ್ಯರ್ಥಿ ಅಬ್ದುಲ್ ರಜಾಕ್ ಚೌಧರಿ ಪಾಲ್ಗೊಂಡಿದ್ದರು   

ಬಸವಕಲ್ಯಾಣ: ‘ಈ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಹೋಳಾಗಿದ್ದು, ಮಲ್ಲಿಕಾರ್ಜುನ ಖೂಬಾ ಅವರು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಹೀಗಿದ್ದಾಗ ನಾನೇಕೆ ಮತದಾರರನ್ನು ಇಬ್ಭಾಗ ಮಾಡಲಿ’ ಎಂದು ಎಐಎಂಐಎಂ ರಾಷ್ಟ್ರೀಯ ಅಧ್ಯಕ್ಷ ಅಸಾದುದ್ದೀನ್ ಓವೈಸಿ ವಾಗ್ದಾಳಿ ನಡೆಸಿದರು.

ನಗರದ ಬಸ್ ನಿಲ್ದಾಣ ಹತ್ತಿರದ ಚೌಧರಿ ಕಾಂಪ್ಲೆಕ್ಸ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಎಐಎಂಐಎಂ ಅಭ್ಯರ್ಥಿ ಅಬ್ದುಲ್ ರಜಾಕ್ ಚೌಧರಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

‘ರಾಜ್ಯದ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಈಚೆಗೆ ನಡೆದ ಪ್ರಚಾರ ಸಭೆಯಲ್ಲಿ ಹೈದರಾಬಾದ್‌ನ ಒಬ್ಬರು ಸಮಾಜವನ್ನು ಇಬ್ಭಾಗಿಸಲು ಅಭ್ಯರ್ಥಿಯನ್ನು ನಿಲ್ಲಿಸಿದ್ದಾರೆ ಎಂದು ಪರೋಕ್ಷವಾಗಿ ನಮ್ಮ ಮೇಲೆ ಹರಿಹಾಯ್ದಿದ್ದಾರೆ. ಆದರೆ, ಅವರ ಪಕ್ಷದಲ್ಲಿಯೇ ಎಲ್ಲವೂ ಸರಿಯಿಲ್ಲ ಎಂಬುದು ಅವರಿಗೆ ಗೊತ್ತಿಲ್ಲವೇ?’ ಎಂದು ಹೇಳಿದರು.

ADVERTISEMENT

‘ಇಲ್ಲಿನ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿ ನಿಲ್ಲುವುದು ಬದಿಗಿರಲಿ. ಸಚಿವ ಈಶ್ವರಪ್ಪ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧವೇ ಸಮರ ಸಾರಿದ್ದಾರೆ. ನನ್ನ ವ್ಯಾಪ್ತಿಯ ಕೆಲಸ ಮಾಡಗೊಡುತ್ತಿಲ್ಲ ಎಂದು ವರಿಷ್ಠರಿಗೆ ದೂರು ಸಲ್ಲಿಸಿದ್ದಾರೆ. ಹೀಗಿದ್ದಾಗ ಬಿಜೆಪಿಯವರು ಅನ್ಯ ಪಕ್ಷದವರ ಬಗ್ಗೆ ಮಾತನಾಡುವುದು ಸರಿಯಲ್ಲ. ಈ ಸಲ ಈ ಕ್ಷೇತ್ರದಲ್ಲಿ ಎಐಎಂಐಎಂ ಅಭ್ಯರ್ಥಿ ಗೆಲುವು ನಿಶ್ಚಿತ’ ಎಂದರು.

ಪಕ್ಷದ ಅಭ್ಯರ್ಥಿ ಅಬ್ದುಲ್ ರಜಾಕ್ ಚೌಧರಿ, ತಾಲ್ಲೂಕು ಘಟಕದ ಅಧ್ಯಕ್ಷ ಸೈಯದ್ ಅಕ್ತರ ನಿಜಾಮಿ, ತಾಲ್ಲೂಕು ಉಸ್ತುವಾರಿ ಮಹ್ಮದ್ ಅಸದ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.