ADVERTISEMENT

ಚೆಕ್‌ ಪೋಸ್ಟ್‌ಗಳಿಗೆ ಸೌಲಭ್ಯ ಒದಗಿಸಿ

ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 15:58 IST
Last Updated 28 ಮಾರ್ಚ್ 2020, 15:58 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಮಾತನಾಡಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಮಾತನಾಡಿದರು   

ಬೀದರ್: ‘ಮಹಾರಾಷ್ಟ್ರ ಹಾಗೂ ತೆಲಂಗಾಣದಿಂದ ಜಿಲ್ಲೆಗೆ ನಿತ್ಯ ಸಾವಿರಾರು ಜನ ಬಂದು ಹೋಗುತ್ತಿದ್ದಾರೆ. ಗಡಿಯಲ್ಲಿರುವ ಎಲ್ಲ ಚೆಕ್‌ಪೋಸ್ಟ್‌ಗಳಿಗೆ ಮೂಲಸೌಕರ್ಯ ಒದಗಿಸಲು ತಕ್ಷಣ ಕ್ರಮಕೈಗೊಳ್ಳಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್‌ ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ‌ ನಡೆಸಿ ಅವರು ಮಾತನಾಡಿದರು.

‘ಚೆಕ್‌ಪೋಸ್ಟ್‌ಗಳಲ್ಲಿ ಕುಡಿಯುವ ನೀರು ಹಾಗೂ ಉಪಾಹಾರದ ಸೌಲಭ್ಯ ಒದಗಿಸಬೇಕು. ಔರಾದ್‌ ತಾಲ್ಲೂಕಿನಲ್ಲಿ ಕೆಲವು ಪೊಲೀಸರು ತಂಬಾಕು ಜಗಿಯುತ್ತ ಕುಳಿತುಕೊಳ್ಳುತ್ತಿದ್ದಾರೆ. ಬೀದರ್‌ನಲ್ಲಿ ಇರುವಷ್ಟು ಬಿಗಿ ಭದ್ರತೆ ಔರಾದ್ ಹಾಗೂ ಕಮಲನಗರ ತಾಲ್ಲೂಕಿನ ಗಡಿಗೂ ಒದಗಿಸಬೇಕು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅವರು ಸ್ಥಳಕ್ಕೆ ಭೇಟಿ ನೀಡಿ ನಿರಂತರವಾಗಿ ಪರಿಶೀಲಿಸಬೇಕು’ ಎಂದು ನಿರ್ದೇಶನ ನೀಡಿದರು.

ADVERTISEMENT

‘ಕೆಲ ಚೆಕ್‌ಪೋಸ್ಟ್‌ಗಳಲ್ಲಿ ಸಮಸ್ಯೆಗಳು ಇರಬಹುದು. ತಹಶೀಲ್ದಾರ್‌ರನ್ನು ಕಳಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಾಗುವುದು. ಹಿಂದಿನ ಎರಡು ಸಭೆಗಳಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಆದರೆ ಯಾರೂ ವ್ಯವಸ್ಥೆ ಮಾಡಿಲ್ಲ. ಸಿಬ್ಬಂದಿಯ ಪಟ್ಟಿ ಸಿದ್ಧಪಡಿಸಿಕೊಂಡು ಊಟದ ಪೊಟ್ಟಣ ಪೂರೈಕೆಗೆ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾಧಿಕಾರಿ ತಿಳಿಸಿದರು.

‘ಜಿಲ್ಲೆಯ ಗಡಿಯಲ್ಲಿ ಸ್ಥಾಪಿಸಲಾಗಿರುವ ಚೆಕ್‌ಪೋಸ್ಟ್‌ಗಳಿಗೆ ಮೂಲಸೌಕರ್ಯ ಒದಗಿಸುವಂತೆ ತಹಶೀಲ್ದಾರರಿಗೆ ಸೂಚಿಸಲಾಗುವುದು’ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್‌, ಜಿಲ್ಲಾ ಪಂಚಾಯಿತಿ ಸಿಇಒ ಗ್ಯಾನೇಂದ್ರಕುಮಾರ ಗಂಗ್ವಾರ್‌, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡಿ ಇದ್ದರು.
ಜೆಸ್ಕಾಂ ಅಧಿಕಾರಿಗಳು ಗೈರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.