ಬೀದರ್: ಕೇಂದ್ರದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ನೀಡಿದ್ದಕ್ಕೆ ಕಾಂಗ್ರೆಸ್ ಜಿಲ್ಲಾ ಘಟಕದ ಪದಾಧಿಕಾರಿಗಳು ಇಲ್ಲಿಯ ಶಿವನಗರದಲ್ಲಿ ಇರುವ ಪಕ್ಷದ ಕಚೇರಿ ಎದುರು ಶುಕ್ರವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ಆಚರಿಸಿದರು.
ಶಾಸಕ, ಸಂಸದ, ರಾಜ್ಯ ಸಚಿವ, ಕೇಂದ್ರ ಸಚಿವರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅತ್ಯುತ್ತಮ ಕೆಲಸ ಮಾಡಿದ್ದಾರೆ. ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ. ಅವರ ಪಕ್ಷ ನಿಷ್ಠೆ ಎಲ್ಲರಿಗೂ ಮಾದರಿಯಾಗಿದೆ. ಅವರಿಗೆ ಟಿಕೆಟ್ ಕೊಟ್ಟಿರುವುದು ಸಂತಸ ಉಂಟು ಮಾಡಿದೆ ಎಂದು ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಹೇಳಿದರು.
ಖರ್ಗೆ ಅವರಿಗೆ ಟಿಕೆಟ್ ನೀಡಿರುವುದಕ್ಕೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಮುಖಂಡರಾದ ರಾಹುಲ್ ಗಾಂಧಿ, ಕೆ.ಸಿ. ವೇಣಿಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ ಹಾಗೂ ಸತೀಶ ಜಾರಕಿಹೋಳಿ ಅವರಿಗೆ ಕೃತಜ್ಞತೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಮುಖಂಡರಾದ ವಿಜಯಕುಮಾರ ಕೌಡಿಯಾಳ, ಶಂಕರರಾವ್ ದೊಡ್ಡಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ಎ. ಸಮಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮೀನಾಕ್ಷಿ ಸಂಗ್ರಾಮ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಜಿಲ್ಲಾ ಘಟಕದ ಅಧ್ಯಕ್ಷ ಸಂಜೀವಕುಮಾರ ಕುರನಳ್ಳಿಕರ್, ಅಝರ್ ರಿಯಾನ್, ಎಂ.ಬಿ. ಬಾಬಾ, ಶರ್ಮಾ ಉಜಣಿ, ಅಮರ ಸಾಗರ್, ಸಜಾವುದ್ದೀನ್, ಕೇಶವ, ರಾಜು, ಮಂಜುನಾಥ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.