ADVERTISEMENT

ನಿಯಮ ಉಲ್ಲಂಘನೆ; ₹1.34 ಕೋಟಿ ದಂಡ

ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2021, 4:05 IST
Last Updated 31 ಜನವರಿ 2021, 4:05 IST
ಬೀದರ್‌ನಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕ್ಯಾಲೆಂಡರ್ ಬಿಡುಗಡೆ ಮಾಡಿದರು
ಬೀದರ್‌ನಲ್ಲಿ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಅವರು ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕ್ಯಾಲೆಂಡರ್ ಬಿಡುಗಡೆ ಮಾಡಿದರು   

ಬೀದರ್: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ದಾಖಲೆಯ ₹1.34 ಕೋಟಿ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

2019ನೇ ಸಾಲಿನಲ್ಲಿ ₹1.04 ಕೋಟಿ ದಂಡ ವಸೂಲಿ ಮಾಡಲಾಗಿತ್ತು. 2020ರ ಜನವರಿಯಿಂದ ಡಿಸೆಂಬರ್ ವರೆಗೆ ₹1.34 ಕೋಟಿ ದಂಡ ವಿಧಿಸಿರುವುದು ಅಧಿಕಾರಿಗಳ ಉತ್ತಮ ಕಾರ್ಯವೈಖರಿಗೆ ನಿದರ್ಶನವಾಗಿದೆ. ಇದೇ ರೀತಿ ಕಟ್ಟುನಿಟ್ಟಾಗಿ ಸಂಚಾರ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಬೇಕು ಎಂದು ಅವರು ಸಲಹೆ ಮಾಡಿದರು.

ADVERTISEMENT

ಜಿಲ್ಲೆಯಲ್ಲಿ ವಾಯು ಮಾಲಿನ್ಯ ತಡೆಗಟ್ಟುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ರಸ್ತೆ ಸುರಕ್ಷತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಯೋಜಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ನಿರ್ದೇಶನ ನೀಡಿದರು.

ಅಧಿಕ ಮಳೆಯಾಗಿರುವ ಕಾರಣ ಜಿಲ್ಲೆಯಲ್ಲಿನ ರಸ್ತೆ ಮಾರ್ಕಿಂಗ್‍ಗಳು ಅಳಿಸಿ ಹೋಗಿವೆ. ಮತ್ತೆ ಮಾರ್ಕಿಂಗ್ ಮಾಡಲು ಲೋಕೋಪಯೋಗಿ ಇಲಾಖೆ ಮತ್ತು ನಗರಸಭೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ ಡಿ.ಎಲ್ ಮಾತನಾಡಿ, ಜಿಲ್ಲೆಯಲ್ಲಿ ಯಾವುದೇ ಕಡೆಗಳಲ್ಲಿ ಅಪಘಾತಗಳು ಸಂಭವಿಸಿದಂತೆ ಸಂಬಂಧಿಸಿದ ಇಲಾಖೆಗಳು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕಬ್ಬು ಸರಬರಾಜು ಮಾಡುವ ಮತ್ತು ವ್ಯವಸಾಯ ಆಧಾರಿತ ಟ್ಯ್ರಾಕ್ಟರ್ ಹಾಗೂ ಇತರ ವಾಹನಗಳಿಗೆ ರಿಫ್ಲೆಕ್ಟರ್ಸ್ ಅವಳಡಿಸಬೇಕು ಎಂದು ಹೇಳಿದರು.

ಹೆದ್ದಾರಿಗಳ ಮೇಲೆ ವಾಹನಗಳು ನಿಲ್ಲದಂತೆ ನೋಡಿಕೊಳ್ಳಬೇಕು. ಮದ್ಯಪಾನ ಮಾಡಿ ವಾಹನ ನಡೆಸುವವರಿಗೆ ದಂಡ ವಿಧಿಸಬೇಕು ಎಂದು ನಿರ್ದೇಶನ ನೀಡಿದರು.

ಪ್ರಾದೇಶಿಕ ಸಾರಿಗೆ ಅಧಿಕಾರಿ ಶಿವಶಂಕರ ಮಾತನಾಡಿ, ರಸ್ತೆ ಅಪಘಾತ ನಿಯಂತ್ರಣಕ್ಕೆ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಒಂದಾದರೂ ರಸ್ತೆ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ತಿಳಿಸಿದರು.

ಅವೈಜ್ಞಾನಿಕ ರಸ್ತೆ ಉಬ್ಬುಗಳು ಹಾಗೂ ಸಂಚಾರ ನಿಯಮ ಕೊರತೆ ಅಪಘಾತಗಳಿಗೆ ಕಾರಣವಾಗಿವೆ ಎಂದು ಹೇಳಿದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ಝಿಬ್ರಾ ಕ್ರಾಸಿಂಗ್ ಇಲ್ಲ. ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯವರು ಝಿಬ್ರಾ ಕ್ರಾಸಿಂಗ್ ಮಾಡಬೇಕು. ಕ್ಯಾಟ್ ಲೈಟ್ ಹಾಕಬೇಕು. ರಸ್ತೆ ಉಬ್ಬು ಹಾಗೂ ತಿರುವು ಇರುವ ಕಡೆಗಳಲ್ಲಿ ಪ್ರತಿಫಲನ ದೀಪಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ನಗರಸಭೆ, ಪದವಿಪೂರ್ವ ಶಿಕ್ಷಣ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಪ್ರಾಧಿಕಾರ, ಪೊಲೀಸ್ ಇಲಾಖೆ ಹಾಗೂ ಪ್ರಾದೇಶಿಕ ಸಾರಿಗೆ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.